ಬೆಂಗಳೂರು,ಏ.13-ಮುಖ್ಯಮಂತ್ರಿ ಸಿದ್ದರಾಮಯ್ಯ ಏ.23ರಂದು ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20ಕ್ಕೆ ಚಾಮುಂಡೇಶ್ವರಿಯಲ್ಲಿ ಹಾಗೂ ಏ.23ಕ್ಕೆ ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಂಬಂಧ ಒಂದು ವಾರ ಕಾಲ ಆ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿ ಬಹುತೇಕ ಹಳ್ಳಿಗಳಿಗೆ ಅಬ್ಬರದ ಪ್ರಚಾರ ನಡೆಸಿದ್ದಾರೆ.
ಉತ್ತರ ಕರ್ನಾಟಕದ ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸ್ಪರ್ಧಿಸಲು ಹೈಕಮಾಂಡ್ ಹಸಿರು ನಿಶಾನೆ ತೋರಿಸಿದ್ದು ಆ ಹಿನ್ನೆಲೆಯಲ್ಲಿ ಅವರು 23ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.
ನಿನ್ನೆಯಷ್ಟೇ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸಭೆ ನಡೆಸಿ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದರು.
ಆ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಬಿ.ಬಿ.ಚಿಮ್ಮನಕಟ್ಟಿ ಅವರು ಮುಖ್ಯಮಂತ್ರಿಗಳು ಸ್ಪರ್ಧಿಸುವುದಾದರೆ ನಾನು ಆ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದರು.
ಸಿಎಂ ಸಿದ್ದರಾಮಯ್ಯನವರು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಲು ತಂತ್ರ ರೂಪಿಸಿದ್ದು , ಹಲವು ಮುಖಂಡರಿಗೆ ಜವಾಬ್ದಾರಿಯನ್ನು ವಹಿಸಿದ್ದಾರೆ. ಇಂದು ಅಥವಾ ನಾಳೆ ಅಭ್ಯರ್ಥಿಗಳ ಆಯ್ಕೆಯ ಪಟ್ಟಿ ಪ್ರಕಟವಾಗಲಿದೆ.
ಮುಖ್ಯಮಂತ್ರಿಗಳೂ ಸೇರಿದಂತೆ ಬಹುತೇಕರು ನಾಮಪತ್ರ ಸಲ್ಲಿಸಲಿದ್ದಾರೆ.