
ಮೈಸೂರು, ಏ.13-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ 7 ಅರೆಸೇನಾ ಪಡೆ ತುಕಡಿ ಆಗಮಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರುವ ಶಿವಕುಮಾರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 7 ಅರೆಸೇನಾ ಪಡೆ ತುಕಡಿಗಳ ಪೈಕಿ 4 ತುಕಡಿ ನಗರಕ್ಕೆ ಹಾಗೂ 3 ತುಕಡಿಗಳನ್ನು ಗ್ರಾಮಾಂತರ ವಿಭಾಗಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದಲ್ಲಿ ಪಥಸಂಚಲನ ನಡೆಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಿದ್ದಾರೆ. ಹಾಗೆಯೇ ಸೂಕ್ಷ್ಮಪ್ರದೇಶಗಳಲ್ಲಿ ಹೆಚ್ಚು ಗಸ್ತು ಮಾಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈವರೆಗೂ 108 ಪ್ರಕರಣಗಳು ದಾಖಲಾಗಿದ್ದು,69 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
2.33 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ, 5 ಲಕ್ಷ ರೂ. ಬೆಲೆಬಾಳುವ ಚಿನ್ನ,. 7.48 ಲಕ್ಷ ರೂ.ನಗದು ಸೇರಿದಂತೆ ಜಿಲ್ಲೆಯ 11 ಕ್ಷೇತ್ರದ ವ್ಯಾಪ್ತಿಯಲ್ಲಿ ಈವರೆಗೆ 8.18 ಕೋಟಿ ರೂ. ಮೌಲ್ಯ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದರು.