ಲಖನೌ:ಏ-12: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಅತ್ಯಾಚಾರ ಹಾಗೂ ಸಂತ್ರಸ್ತೆಯ ತಂದೆಯ ಸಾವು ಪ್ರಕರಣ ಸಿಬಿಐಗೆ ಹಸ್ತಾಂತರಿಸಲಾಗಿದೆ.
ಪ್ರಕರಣ ಸಂಬಂಧ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದೆ. ಉನ್ನಾವೋ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ಐಟಿಯ ವರದಿ ಅನ್ವಯ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚನೆ ನೀಡಿತ್ತು.
ಇನ್ನು ಸಂತ್ರಸ್ತೆಯ ತಂದೆಗೆ ಸೂಕ್ತ ಚಿಕಿತ್ಸೆ ನೀಡದ ಕಾರಣ ಡಾ. ಡಿಕೆ ದ್ವಿವೇದಿ ಮತ್ತು ಡಾರ್ ಪ್ರಶಾಂತ್ ಉಪಾದ್ಯಾಯ ಅವರನ್ನು ಅಮಾನತು ಮಾಡಲಾಗಿದೆ. ಇನ್ನು ಸಂತ್ರಸ್ತೆ ನೀಡಿದ ದೂರನ್ನು ಸ್ವೀಕರಿಸದ ಸಫೀಪುರ್ ಸರ್ಕಲ್ ಆಫೀಸರ್ ಕುನ್ವಾರ್ ಬಹದ್ದೂರ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ.
ಬಿಜೆಪಿ ಶಾಸಕ ಹಾಗೂ ಅವರ ಸಹಚರರು ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯ ಕುಟುಂಬ ಸದಸ್ಯರು ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ನಿವಾಸದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕಳೆದ ವರ್ಷ ಜೂನ್ ತಿಂಗಳಲ್ಲಿ ಉನ್ನಾವೋದ 16 ವರ್ಷದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಪ್ರಮುಖ ಆರೋಪಿಯಾಗಿದ್ದಾರೆ.