ಬೆಂಗಳೂರು,ಏ.15- ಜೆಡಿಎಸ್ ಅಲ್ಪಸಂಖ್ಯಾತರ ಕ್ರೈಸ್ತ ಘಟಕದ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರ ಸಭೆಯನ್ನು ನಾಳೆ ನಡೆಸಲಿದೆ.
ಜೆಡಿಎಸ್ನ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಈ ಸಭೆಯನ್ನು ಕರೆಯಲಾಗಿದ್ದು, ಪ್ರಸ್ತುತ ವಿಧಾನಸಭೆ ಚುನಾವಣೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಕಾರ್ಯತಂತ್ರ ಹಾಗೂ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ.
ಜೆಡಿಎಸ್ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣರಾವ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದ್ದು, ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಕ್ಷದ ಪ್ರಮುಖರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಸಮಾವೇಶದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ರೂಪುರೇಷೆಗಳನ್ನು ನಿರ್ಧರಿಸುವ ಸಾಧ್ಯತೆಗಳಿವೆ. ಈಗಾಗಲೇ ಜೆಡಿಎಸ್ ಹಿರಿಯ ನಾಗರಿಕರು, ಆಟೋ ಚಾಲಕರು ಸೇರಿದಂತೆ ವಿವಿಧ ಸಮುದಾಯಗಳ ಸಭೆಗಳನ್ನು ನಡೆಸಿ ಸಲಹೆ ಹಾಗೂ ಅಭಿಪ್ರಾಯಗಳನ್ನು ಸ್ವೀಕರಿಸಿದೆ.
ಅದರಂತೆ ಅಲ್ಪಸಂಖ್ಯಾತ ಸಮುದಾಯವಾದ ಕ್ರೈಸ್ತ ಘಟಕದ ಸಭೆಯನ್ನು ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.