ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಅಧಿಸೂಚನೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು,ಏ.16- ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಮೇ 12ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ನಾಳೆಯಿಂದ ಒಂದು ವಾರ ಕಾಲ ನಾಮಪತ್ರ ಸಲ್ಲಿಸಲು ಚುನಾವಣಾ ಆಯೋಗ ಅವಕಾಶ ನೀಡಿದೆ. ಚುನಾವಣಾ ಅಧಿಕಾರಿಗಳು ನಾಳೆ ಅಧಿಸೂಚನೆ ಹೊರಡಿಸಿದ ಬಳಿಕ ಸ್ಪರ್ಧಾಕಾಂಕ್ಷಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಬಹುದಾಗಿದೆ.

ಏ.24ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದ್ದು , ಏ.25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.27ರಂದು ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನವಾಗಿದ್ದು, ಆನಂತರ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ನಡುವೆ ಪೈಪೆÇೀಟಿ ಏರ್ಪಡಲಿವೆ.

ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಮೊದಲ ಹಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, 2ನೇ ಹಾಗೂ ಅಂತಿಮ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿವೆ.

ಈ ನಡುವೆ ಜೆಡಿಯು, ಬಿಎಸ್‍ಪಿ, ಎಂಇಪಿ ಸೇರಿದಂತೆ ಇತರೆ ಪಕ್ಷಗಳು ಕೂಡ ಚುನಾವಣೆ ಸ್ಪರ್ಧೆ ಮಾಡಲು ಸಿದ್ದತೆ ನಡೆಸಿವೆ. ಈಗಾಗಲೇ ಕೆಲವು ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿವೆ.

ಒಂದೆಡೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿದರೆ ಬಹುತೇಕ ಎಲ್ಲ ಪಕ್ಷಗಳ ನಾಯಕರು ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಯಾಚನೆಯಲ್ಲಿ ತೊಡಗಿದ್ದಾರೆ.
ಜೊತೆಗೆ ಪರಸ್ಪರ ಆರೋಪ ಪ್ರತ್ಯಾರೋಪಗಳ ವಾಗ್ದಾಳಿಯನ್ನು ಕೂಡ ನಡೆಸುತ್ತಿದ್ದು, ಮತದಾರರ ಮನವೊಲಿಸುವ ಪ್ರಯತ್ನ ವನ್ನು ನಿರಂತರವಾಗಿ ಮಾಡುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ