ಮೈಸೂರು, ಏ.17- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಟಿಕೆಟ್ ಆಕಾಂಕ್ಷಿಗಳು ಘೇರಾವ್ ಹಾಕಿದ ಘಟನೆ ನಡೆದಿದೆ.
ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಕೆ ಬಡಾವಣೆಯಿಂದ ಹೊರಡುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಕಾರಿನ ಮುಂದೆ ಸುತ್ತುವರಿದು ನಮ್ಮ ನಾಯಕರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ ಘಟನೆ ನಡೆದಿದೆ.
ಸಿರಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ನಾಗರಾಜ್ ಅವರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಬಿ.ಎಂ.ನಾಗರಾಜ್ ಅವರ ನೂರಕ್ಕೂ ಹೆಚ್ಚು ಬೆಂಬಲಿಗರು ನಗರಕ್ಕೆ ಆಗಮಿಸಿ ಮುಖ್ಯಮಂತ್ರಿ ಕಾರಿಗೆ ಸುತ್ತುವರಿದು ನಾಗರಾಜ್ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ನಾಗರಾಜ್ ಬೆಂಬಲಿಗರಾದ ಸಿರಗುಪ್ಪ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಎಪಿಎಂಸಿ, ನಗರಸಭಾ ಸದಸ್ಯರು, ಯೂತ್ ಕಾಂಗ್ರೆಸ್ ಬ್ಲಾಕ್ ಸದಸ್ಯರು, ನೂರಾರು ಮಂದಿ ಆಗಮಿಸಿ ಟಿಕೆಟ್ಗೆ ಆಗ್ರಹಿಸಿದ್ದಾರೆ.
ಒಂದು ವೇಳೆ ಅವರಿಗೆ ಟಿಕೆಟ್ ನೀಡದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದಾರೆ.