
ತುಮಕೂರು, ಏ.18- ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಗೆಲುವು ಖಚಿತ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿ ಪಕ್ಷ ಬಳ್ಳಾರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದರು.
ಅವರು ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮಹಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಪಕ್ಷ ತನ್ನ ಅಭ್ಯರ್ಥಿಗಳನ್ನು ಕ್ಷೇತ್ರಗಳಲ್ಲಿ ಘೋಷಣೆ ಮಾಡಿದ ನಂತರ ಟಿಕೆಟ್ ಸಿಗಲಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದು ಸಹಜ. ಅಂತವರ ಜೊತೆ ಕುಳಿತು ಮಾತುಕತೆ ನಡೆಸಿ ವಿವಾದ ಬಗೆಹರಿಸಿಕೊಳ್ಳೂತ್ತೇನೆ ಎಂದ ಅವರು, ವರಿಷ್ಠರು ನನಗೆ ಪ್ರಚಾರ ಸಮಿತಿಗೆ ಸೇರಿಸಿದ್ದಾರೆ. ಈಗ ನಡೆದಾಡುವ ದೇವರ ಆಶೀರ್ವಾದ ಪಡೆದಿದ್ದೇನೆ.
ಶ್ರೀಕ್ಷೇತ್ರಕ್ಕೆ ಬಂದ ನಂತರ ಆತ್ಮವಿಶ್ವಾಸ ಹೆಚ್ಚಾಗಿದೆ. ಇಡೀ ರಾಜ್ಯಾದ್ಯಂತ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ.ಜ್ಯೋತಿಗಣೇಶ್, ಹೆಬ್ಬಾಕ ರವಿ, ಶಂಭು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.