ಬೆಂಗಳೂರು, ಏ.20-ಕುರುಬ ಸಮುದಾಯದ ಕುಲಬಾಂಧವರು ಈ ಬಾರಿ ಯಾವುದೇ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದರೂ ಸಮುದಾಯ ಅವರನ್ನು ಒಮ್ಮತದಿಂದ ಗೆಲ್ಲಿಸಿಕೊಳ್ಳಬೇಕೆಂದು ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟ ಮನವಿ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಧಾರವಾಡದ ಶ್ರೀ ರೇವಣಸಿದ್ದೇಶ್ವರ ಮಠದ ಶ್ರೀ ಬಸವರಾಜ ದೇವರು, ಯಾವುದೇ ಪಕ್ಷವನ್ನು ನೋಡದೆ ಕುರುಬ ಸಮುದಾಯದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವಂತೆ ಮನವಿ ಮಾಡಿದರು.
ಬಿಜೆಪಿ ಮುಖಂಡರಾದ ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ, ಸಂಸದರಾದ ಪ್ರತಾಪ್ಸಿಂಹ, ಯಡಿಯೂರಪ್ಪ ಮತ್ತಿತರರು ಸಿದ್ದರಾಮಯ್ಯ ಅವರ ವಿರುದ್ಧ ಅಶ್ಲೀಲ ಹಾಗೂ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು. ಸಿದ್ದರಾಮಯ್ಯ ಅವರು ರಾಜ್ಯದ ಆರು ಕೋಟಿ ಜನರ ಆಶೀರ್ವಾದ ಪಡೆದು ಮುಖ್ಯಮಂತ್ರಿಯಾಗಿದ್ದಾರೆ. ಅವರ ಬಗ್ಗೆ ಏಕವಚನದಲ್ಲಿ ಮಾತನಾಡುವುದು, ಕೀಳು ಭಾಷೆ ಬಳಸುವುದನ್ನು ನಿಲ್ಲಿಸಬೇಕು. ಇಲ್ಲದೆ ಹೋದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕುಮಾರಸ್ವಾಮಿಯವರು ಡಿವೈಎಸ್ಪಿ ದಿವಂಗತ ಕಲ್ಲಪ್ಪ ಹಂಡಿಭಾಗ್ ಅವರ ಪತ್ನಿ ಕುರಿತು ಕೀಳುಮಟ್ಟದ ಪದ ಪ್ರಯೋಗ ಮಾಡಿದ್ದು, ಅದಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
ಒಕ್ಕೂಟದ ರಾಜ್ಯಾಧ್ಯಕ್ಷ ಆರ್.ಕೋದಂಡರಾಮು, ಪ್ರಧಾನ ಕಾರ್ಯದರ್ಶಿ ಇ.ಎಂ.ನಾಗರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.