ನವದೆಹಲಿ, ಏ.20-ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಕಾರ್ಯನಿರ್ವಹಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಇಂದು ವಾಗ್ದಂಡನೆ ನಿರ್ಣಯ ನೋಟಿಸ್ ನೀಡಿವೆ.
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಇಂದು ರಾಜಧಾನಿ ದೆಹಲಿಯಲ್ಲಿ ಉಪ ರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿ ಡಾ ಎಂ.ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಈ ಸಂಬಂಧ ನೋಟಿಸ್ ಸಲ್ಲಿಸಿತು.
ಸಿಜೆಐ ವಿರುದ್ಧ ವಾಗ್ದಂಡನೆಗಾಗಿ ಏಳು ರಾಜಕೀಯ ಪಕ್ಷಗಳಿಗೆ ಸೇರಿದ ರಾಜ್ಯಸಭೆಯ 60ಕ್ಕೂ ಹೆಚ್ಚು ಸಂಸದರು ನೋಟಿಸ್ಗೆ ಸಹಿ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಾಂಗ್ರೆಸ್, ಎನ್ಸಿಪಿ, ಸಿಪಿಐ-ಎಂ, ಸಿಪಿಐ, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಮುಖಂಡರು ಇಂದು ನಾಯ್ಡು ಅವರನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಿ ಮುಖ್ಯ ನ್ಯಾಯಮೂರ್ತಿ ಅವರಿಗೆ ನೋಟಿಸ್ ಜಾರಿಗೊಳಿಸುವಂತೆ ಕೋರಿದರು.
ನಾಯ್ಡು ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭೆ ವಿರೋಧಪಕ್ಷದ ನಾಯಕ ಗುಲಾಂ ನಬಿ ಆಜಾದ್, ಈ ಸಂಬಂಧ ನೋಟಿಸ್ ನೀಡಿರುವುದನ್ನು ಖಚಿತಪಡಿಸಿದರು.