ಬೆಂಗಳೂರು, ಏ.21-ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಏ.23ರಂದು ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ತಿಳಿಸಿದರು.
ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ನಟಿ ಪೂಜಾಗಾಂಧಿ ಸೇರಿದಂತೆ ಮತ್ತಿತರರನ್ನು ಪಕ್ಷಕ್ಕೆ ಬರ ಮಾಡಿಕೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಹಾಗೂ ಬೀದರ್ ಜಿಲ್ಲೆಯ ಪಕ್ಷದ ನಾಯಕರು, ಅಭಿಮಾನಿಗಳ ಒತ್ತಾಯದ ಮೇರೆಗೆ ಬಸವ ಕಲ್ಯಾಣದಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಹೇಳಿದರು.
ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ನಾನು ಬೀದರ್ ಜಿಲ್ಲೆಯ ಉಸ್ತುವಾರಿಯಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಕಳೆದ 10-15 ವರ್ಷಗಳಿಂದಲೂ ಬಸವ ಕಲ್ಯಾಣದಿಂದ ಸ್ಪರ್ಧಿಸುವಂತೆ ಒತ್ತಾಯ ಹೇರಲಾಗುತ್ತಿದೆ. ನಮ್ಮ ಪಕ್ಷದ ಶಾಸಕರಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರು ಪಕ್ಷ ಬಿಟ್ಟಿದ್ದ ಹಿನ್ನೆಲೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.