ಬೆಂಗಳೂರು, ಏ.21-ರಾಜ್ಯದಲ್ಲಿ ಚದುರಿದಂತೆ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಇನ್ನೂ ಎರಡು-ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಸ್ಥಳೀಯವಾಗಿ ವಾತಾವರಣದಲ್ಲಿ ಉಂಟಾಗುವ ಬದಲಾವಣೆ, ಬಿಸಿಲಿನ ತಾಪಮಾನ ಹೆಚ್ಚಳ ಮೊದಲಾದ ಕಾರಣಗಳಿಂದಾಗಿ ಗುಡುಗು-ಮಿಂಚು ಸಹಿತ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ನಿನ್ನೆ ಸಂಜೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗಿದೆ. ಇಂದು ಸಂಜೆ ಹಾಗೂ ರಾತ್ರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ತಿಳಿಸಿದರು.