ನವದೆಹಲಿ, ಏ.22-ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರ ಚಾರಿತ್ರಿಕವಾದುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಈ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ಅವರು, ಕ್ರೂರ ಅಪರಾಧ ಕೃತ್ಯಗಳನ್ನು ಎಸಗುವವರಿಗೆ ಇಂಥ ಶಿಕ್ಷೆಯ ಅಗತ್ಯವಿದೆ. ಈ ದೃಷ್ಟಿಯಿಂದ ಸರ್ಕಾರದ ನಿರ್ಧಾರ ಐತಿಹಾಸಿಕ ಎಂದು ಸ್ವಾಗತಿಸಿದರು.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಿನ್ನೆ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಕಾನೂನು ಜಾರಿಗೆ ಅನುಮೋದನೆ ನೀಡಿತ್ತು.
ಅತ್ಯಾಚಾರ ಪ್ರಕರಣದ ದೋಷಿಗಳಿಗೂ ಶಿಕ್ಷೆಯ ಪ್ರಮಾಣವನ್ನು 10 ವರ್ಷಗಳಿಂದ 20 ವರ್ಷಗಳಿಗೆ ಹೆಚ್ಚಿಸಲು ಶೀಘ್ರವೇ ಕಾನೂನು ಜಾರಿ ಉದ್ದೇಶದಿಂದ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಇದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಒಪ್ಪಿಗೆ ಸೂಚಿಸಿದ್ದಾರೆ.