
ಬೆಂಗಳೂರು,ಏ.23-ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುವ ದಿನದಂದು(ಮೇ-12) ಜಿಲ್ಲೆಯಲ್ಲಿ ನಡೆಯಲಿರುವ ಜಾತ್ರೆ-ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಪಾಲಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಮುಕ್ತ ಹಾಗೂ ನ್ಯಾಯೋಚಿತ ಚುನಾವಣೆಯನ್ನು ನಡೆಸಲು ಹಾಗೂ ಶಾಂತಿ ಮತ್ತು ಕಾನೂನು ವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮತದಾನದ ಮೇ 12ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ, ನಗರ,ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುವ ಸಂತೆ-ಜಾತ್ರೆಗಳನ್ನು ನಿಷೇಧಿಸಿ ಆದೇಶಿಸಿದ್ದು, ಪೆÇಲೀಸ್ ಇಲಾಖೆ ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೆ ತರಲು ಸೂಚಿಸಿದ್ದಾರೆ.
ಹೊಸಕೋಟೆ-178 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾವರೆಕೆರೆ, ಚೊಕ್ಕಹಳ್ಳಿ ಮತ್ತು ಪಿಲ್ಲಗುಂಪೆ ಹಾಗೂ ನೆಲಮಂಗಲ-181 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನರಸೀಪುರ ಗ್ರಾಮಗಳಲ್ಲಿ ಮೇ12 ರಂದು ನಡೆಯುವ ಸಂತೆಯನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಪಾಲಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.