ಜೆಡಿಎಸ್ ನಿಂದ 30 ಮಂದಿ ತಾರಾ ಪ್ರಚಾರಕರು: ಚುನಾವಣಾ ಆಯೋಗದಿಂದ ಅನುಮತಿ

ಬೆಂಗಳೂರು, ಏ.26-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೇರಿದಂತೆ 30 ಮಂದಿ ತಾರಾ ಪ್ರಚಾರಕರು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾರತದ ಚುನಾವಣಾ ಆಯೋಗದಿಂದ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗುವ ತಾರಾ ಪ್ರಚಾರಕರಿಗಾಗಿ ಅನುಮತಿಯನ್ನು ಜೆಡಿಎಸ್ ಪಡೆದಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಪಕ್ಷದ ರಾಷ್ಟ್ರೀಯ ಮಹಾಪ್ರಧಾನಕಾರ್ಯದರ್ಶಿಗಳಾದ ಡ್ಯಾನಿಷ್ ಆಲಿ, ಬಿ.ಎಂ.ಫಾರೂಕ್, ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಬಸವರಾಜ ಹೊರಟ್ಟಿ, ಬಿ.ಬಿ.ನಿಂಗಯ್ಯ, ಬಂಡೆಪ್ಪ ಕಾಶಂಪೂರ್, ಎಚ್.ವಿಶ್ವನಾಥ್ ಅವರು ತಾರಾ ಪ್ರಚಾರಕರಾಗಿದ್ದಾರೆ.

ಅಲ್ಲದೆ, ಶಾಸಕರಾದ ವೈ.ಎಸ್.ವಿ.ದತ್ತ, ಮಧುಬಂಗಾರಪ್ಪ, ನಟ ನಿಖಿಲ್ ಕುಮಾರಸ್ವಾಮಿ, ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ, ಪುತ್ರ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ, ಗೀತಾ ಶಿವರಾಜ್‍ಕುಮಾರ್, ವಿಧಾನಪರಿಷತ್ ಸದಸ್ಯರಾದ ರಮೇಶ್‍ಬಾಬು, ಕೆ.ಟಿ.ಶ್ರೀಕಂಠೇಗೌಡ, ಕಾಂತರಾಜು, ಟಿ.ಎ.ಶರವಣ, ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಸೇರಿದಂತೆ ಪಕ್ಷದ ಹಲವು ಮುಖಂಡರು ತಾರಾ ಪ್ರಚಾರಕರಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕುಮಾರಸ್ವಾಮಿ ಮತ್ತು ದೇವೇಗೌಡರು ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡು ಪಕ್ಷದ ಅಭ್ಯರ್ಥಿಗಳ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ಜೊತೆಗೆ ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಅವರೂ ಕೂಡ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ನಟಿ ಅಮೂಲ್ಯ ಅವರು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಾಮಚಂದ್ರ ಅವರ ಪರವಾಗಿ ಮತಯಾಚನೆಯಲ್ಲಿ ತೊಡಗಿದ್ದಾರೆ. ಇತ್ತೀಚೆಗಷ್ಟೆ ಜೆಡಿಎಸ್‍ಗೆ ಮರು ಸೇರ್ಪಡೆಯಾದ ನಟಿ ಪೂಜಾಗಾಂಧಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೆ, ರಚಿತಾರಾಮ್ ಕೂಡ ಜೆಡಿಎಸ್ ಮತ ನೀಡುವಂತೆ ಈಗಾಗಲೇ ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ