ತುಮಕೂರು,ಏ.26-ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವುದರ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಟ್ಟು ಮತಯಾಚಿಸುವಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸುರೇಶ್ಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.
ತುಮಕೂರಿನಲ್ಲಿರುವ ಅವರ ಪಕ್ಷದ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ನಿಮ್ಮ ಕ್ಷೇತ್ರದಲ್ಲಿ ಏನೇನು ಅಭಿವೃದ್ಧಿ ಕಾರ್ಯಗಳಾಗಿವೆ, ಇನ್ನು ಏನು ಮಾಡಬೇಕಾಗಿದೆ ಎಂದು ಸುರೇಶ್ಗೌಡ ಅವರನ್ನು ಕೇಳಿದಾಗ, 220 ಕ್ಷೇತ್ರಗಳಲ್ಲಿ ಮಾಡದಿರುವುದನ್ನು ಇಲ್ಲಿ ಮಾಡಲಾಗಿದೆ. ತಮ್ಮ ಕ್ಷೇತ್ರದಲ್ಲಿ ಹೈಟೆಕ್ ಆಸ್ಪತ್ರೆಗಳು, ನೀರಾವರಿ ಯೋಜನೆ, ಶಾಲಾಕಟ್ಟಡಗಳು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಶುದ್ಧ ಕುಡಿಯುವ ಘಟಕಗಳು, ಜಿಲ್ಲಾ ಪ್ರಧಾನ ರಸ್ತೆಗಳು ಸೇರಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದರು.
ಆ ಕ್ಷೇತ್ರದಲ್ಲಿ ಇನ್ನು ಏನೇನು ಯೋಜನೆಗಳನ್ನು ಅಭಿವೃದ್ದಿಪಡಿಸಬೇಕಾಗಿದೆ, ನೀವು ಮಾಡಿರುವ ಅಭಿವೃದ್ದಿ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಿ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ,ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ಎಂದು ಪ್ರಧಾನಿ ಮೋದಿ ಸಲಹೆ ಮಾಡಿದರು.