ಉಡುಪಿ :ಏ-27: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಿಡುಗಡೆ ಮಾಡಿರುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯು ವಿಷನ್, ಮಿಷನ್ ಇಲ್ಲದ ಕಮಿಷನ್ ಪ್ರಣಾಳಿಕೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ಟೀಕಿಸಿದ್ದಾರೆ.
ಉಡುಪಿ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಲ್ಲಿ ಸಿದ್ದರಾಮಯ್ಯ ಸರಕಾರ ಒಂದೇ ಒಂದು ಸಾಧನೆ ಮಾಡಿಲ್ಲ. ಸಿದ್ದರಾಮಯ್ಯ ಕಮಿಷನ್ ಮುಖ್ಯಮಂತ್ರಿಯಾಗಿದ್ದಾರೆ. ರಾಹುಲ್ ಗಾಂಧಿಗೆ ಕರ್ನಾಟಕ ಅಂದರೆ ಎಟಿಎಂ ಮೆಶಿನ್ ಇದ್ದ ಹಾಗೆ. ಡೈರಿ ಸೇರಿದಂತೆ ಹಲವು ಹಗರಣಗಳಲ್ಲಿ ಕಾಂಗ್ರೆಸ್ ಸರಕಾರ ಭಾಗಿಯಾಗಿದೆ ಎಂದು ಆರೋಪಿಸಿದರು.
2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಜನರಿಗೆ ಭರವಸೆ ನೀಡಿರುವ ಯಾವುದೇ ಕಾರ್ಯಕ್ರಮವನ್ನು ಜಾರಿಗೆ ತಂದಿಲ್ಲ. ಒಂದೇ ಒಂದು ನೀರಾವರಿ ಯೋಜನೆ ಅನುಷ್ಠಾನಗೊಳಿಸದೆ ರೈತರಿಗೆ ಅನ್ಯಾಯ ಮಾಡಿದೆ. ಇವರ ದುರಾಡಳಿತದಿಂದ ಕಳೆದ ಐದು ವರ್ಷಗಳಲ್ಲಿ 3,781 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.
ಮನ್ ಕೀ ಬಾತ್, ನವ ಕರ್ನಾಟಕ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿಯ ಹಲವು ಘೋಷಣೆಗಳನ್ನು ರಾಹುಲ್ ಗಾಂಧಿ ಅನುಕರಣೆ ಮಾಡುತ್ತಿದ್ದಾರೆ. ಇವರಿಗೆ ಸ್ವಂತಿಕೆ ಎಂಬುದಿಲ್ಲ. ರಾಜ್ಯದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ರಾಹುಲ್ ವಂದೇ ಮಾತರಂ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ನಿಜವಾದ ಮುಖ ಎಂದು ಅವರು ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲುವ ಭೀತಿಯಲ್ಲಿ ಎರಡು ಕಡೆ ಸ್ಪರ್ಧಿ ಸುತ್ತಿದ್ದಾರೆ. ಅಂತಿಮವಾಗಿ ಅವರು ಎರಡು ಕಡೆ ಕೂಡ ಸೋಲನುಭವಿಸುತ್ತಾರೆ. ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಅನ್ವರ್ ಮಾಣಿಪ್ಪಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಯಶ್ಪಾಲ್ ಸುವರ್ಣ, ಕಟಪಾಡಿ ಶಂಕರ ಪೂಜಾರಿ, ಶ್ಯಾಮಲಾ ಕುಂದರ್, ದಿನಕರ ಬಾಬು, ಉದಯ ಕುಮಾರ್ ಶೆಟ್ಟಿ ಹಾಜರಿದ್ದರು.
BJP,Udup,Sambith patra