ಶ್ರೀನಗರ, ಏ.30-ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆಯನ್ನು ಭದ್ರತಾ ಪಡೆ ತೀವ್ರಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಯೋಧರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕೆಲವು ಸಿಬ್ಬಂದಿಗೂ ಗಾಯಗಳಾಗಿವೆ.
ದ್ರಾಬ್ಗಂ ಪ್ರದೇಶದಲ್ಲಿ ಇಬ್ಬರಿಂದ ಮೂವರು ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದು ಶೋಧ ನಡೆಸುತ್ತಿತ್ತು. ಈ ಸಂದರ್ಭದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದಾಗ ಕೆಲವು ಯೋಧರು ಗಾಯಗೊಂಡರು. ನಂತರ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾದರು. ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಇರಬಹುದಾದ ಮತ್ತಷ್ಟು ಉಗ್ರರಿಗಾಗಿ ಶೋಧ ಮುಂದುವರಿದಿದೆ.