ಮೈಸೂರು,ಮೇ.01- ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೆ ಅಭಿರಾಂ ಜಿ. ಶಂಕರ್ ಅವರು ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚುನಾವಣಾ ಕಾರ್ಯಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗ ಪ್ರತಿಯೊಂದು ವಿಷಯವನ್ನು ಗಂಭೀರವಾಗಿ ಗಮನಿಸುತ್ತಿದೆ. ಯಾರೇ ಆಗಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ನೇರವಾಗಿ ಆಯೋಗಕ್ಕೆ ದೂರು ಹೋಗುತ್ತದೆ ಹಾಗಾಗಿ ಇಂತಹ ಪರಿಸ್ಥಿತಿ ಬರದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ ಎಂದು ಹೇಳಿದರು.
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು, ಆದಾಯ ತೆರಿಗೆ ಇಲಾಖೆಯಲ್ಲಿ ದಾಖಲಾಗಿರುವ ಪ್ರಕರಣಗಳು ಹಾಗೂ ಪೆÇಲೀಸ್ ಇಲಾಖೆ, ಅಬಕಾರಿ ಇಲಾಖೆಯಲ್ಲಿನ ಪ್ರಕರಣಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಅವರ ಜಿಲ್ಲಾಧಿಕಾರಿ ಟಿ.ಯೋಗೀಶ್, ಮೂಡಾ ಆಯುಕ್ತ ಕಾಂತರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಲೋಕನಾಥ್ ಮತ್ತಿತರರು ಉಪಸ್ಥಿತರಿದ್ದರು.