ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಅಸಾಧ್ಯ: ಜೆಡಿಎಸ್ ಅಭ್ಯರ್ಥಿ ಕೆ.ಗೋಪಾಲಯ್ಯ

ಬೆಂಗಳೂರು, ಮೇ 1- ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಅಸಾಧ್ಯ. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಬಿಜೆಪಿ ಮತ್ತು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಹೆಚ್ಚಿದಂತಾಗಿದೆ ಎಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ಕ್ಷೇತ್ರಾದ್ಯಂತ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಉತ್ತಮ ಕೆಲಸ ಮಾಡಿದ್ದು, ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗಾಗಿ ಈ ಬಾರಿ ಜನತೆ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಪ್ರಚಾರದ ಸಂದರ್ಭದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಎಲ್ಲ ವರ್ಗದ ಜನರು ಬೆಂಬಲ ನೀಡುವುದಾಗಿ ಭರವಸೆ ನೀಡುತ್ತಿದ್ದಾರೆ. ಮತ್ತೊಮ್ಮೆ ಆಯ್ಕೆಯಾಗುವ ವಿಶ್ವಾಸ ನನ್ನಲ್ಲಿ ಬಲವಾಗಿದೆ ಎಂದು ಅವರು ಹೇಳಿದರು.

ನಂದಿನಿ ಲೇಔಟ್, ಕುರುಬರಹಳ್ಳಿ, ಮಹಾಲಕ್ಷ್ಮಿ ಲೇಔಟ್, ನಾಗ್‍ಪುರ, ವೃಷಭಾವತಿನಗರ ಸೇರಿದಂತೆ ಹಲವೆಡೆ ತಮ್ಮ ಪತ್ನಿ, ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ಸ್ಥಳೀಯ ಜೆಡಿಎಸ್ ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳೊಂದಿಗೆ ಬಿರುಸಿನ ಪ್ರಚಾರ ನಡೆಸಿದರು.

ಪ್ರಚಾರಕ್ಕೆ ಕಾರ್ಯಕರ್ತರು, ಬೆಂಬಲಿಗರು ಸ್ವಯಂಪ್ರೇರಿತರಾಗಿ ಬರುತ್ತಿದ್ದಾರೆ. ಇದು ನನ್ನ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಯುವಕರು, ಮಹಿಳೆಯರು ಎಲ್ಲರೂ ಬೆಂಬಲ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ