ದಾವಣಗೆರೆ, ಮೇ 2- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮತ್ತು ನಾಡಿದ್ದು(ಮೇ 4) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ತಿಳಿಸಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಹರಿಹರ ಗಾಂಧಿ ಮೈದಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮಪ್ಪ ಪರ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಲಿದ್ದಾರೆ ಎಂದು ಸುದ್ದಿಗಾರರಿಗೆ ಅವರು ತಿಳಿಸಿದ್ದಾರೆ.
ನಾಳೆ ಮಧ್ಯಾಹ್ನ 1.30ಕ್ಕೆ ಮಾಯಕೊಂಡದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್.ಬಸವಂತಪ್ಪ ಅವರ ಪರ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದರು. ಮೇ 4ರಂದು ಬೆಳಗ್ಗೆ 11 ಗಂಟೆಗೆ ಸಂತೆಬೆನ್ನೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಡ್ನಾಳ್ ರಾಜಣ್ಣ ಅವರ ಪರ ಪ್ರಚಾರ ನಡೆಸಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಘೋಷಿಸಿರುವ ಜಿಲ್ಲೆಯ ಕಮ್ಯುನಿಸ್ಟ್ ಪಕ್ಷದ ಮುಖಂಡ ಎಚ್.ಕೆ.ರಾಮಚಂದ್ರಪ್ಪ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಮುತ್ತಣ್ಣ ಅವರು ಬಿಜೆಪಿ ಸೇರುವುದರಿಂದ ಕಾಂಗ್ರೆಸ್ಗೆ ನಷ್ಟವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯ ಜಗಳೂರು ಕ್ಷೇತ್ರದಲ್ಲಿ ಪುಷ್ಪಾ ಲಕ್ಷ್ಮಣಸ್ವಾಮಿ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದರಿಂದ ಪಕ್ಷಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.