ಬಹುಕೋಟಿ ರೂ.ಗಳ ಅಕ್ರಮ ಗಣಿ ಹಗರಣ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಚುನಾವಣಾ ಪ್ರಚಾರ ಮಾಡದಂತೆ ಸುಪ್ರೀಂಕೋರ್ಟ್ ತೀರ್ಪು

ನವದೆಹಲಿ, ಮೇ 4- ಬಹುಕೋಟಿ ರೂ.ಗಳ ಅಕ್ರಮ ಗಣಿ ಹಗರಣದ ಸಂಬಂಧ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಮಾಡದಂತೆ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಈ ಆದೇಶದೊಂದಿಗೆ ರೆಡ್ಡಿಗೆ ಭಾರೀ ಮುಖಭಂಗವಾಗಿದೆ.

ಮೇ 12ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ತಮ್ಮ ಸಹೋದರ ಸೋಮಶೇಖರ್ ರೆಡ್ಡಿ ಅವರ ಪರ ಪ್ರಚಾರ ನಡೆಸಲು ತಮಗೆ ಅನುಮತಿ ನೀಡಬೇಕೆಂದು ಜನಾರ್ಧನ ರೆಡ್ಡಿ ಸುಪ್ರೀಂಕೋರ್ಟ್‍ಗೆ ಮನವಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ನೀವು ಆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವಂತಿಲ್ಲ ಎಂದು ರೆಡ್ಡಿ ಕೋರಿಕೆಯನ್ನು ವಜಾಗೊಳಿಸಿತು.

ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ರೆಡ್ಡಿಯನ್ನು ತಮ್ಮ ಪಕ್ಷದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೂರುವಿಟ್ಟಿದ್ದರೂ ಅವರು ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಅಲ್ಲದೆ, ಬುಧವಾರ ಮೊಳಕಾಲ್ಮೂರು ಕ್ಷೇತ್ರದಲ್ಲಿ ತಮ್ಮ ಆಪ್ತ ಸ್ನೇಹಿತ ಶ್ರೀರಾಮುಲು ಪರವೂ ಪ್ರಚಾರ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ