ಬೆಂಗಳೂರು:ಮೇ-7: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿರುವ ನೋಟ್ ಬ್ಯಾನ್ ಹಾಗೂ ಜಿಎಸ್‌ಟಿ ವಿರುದ್ಧ ಹರಿಹಾಯ್ದರು. ಮೋದಿ ತೆಗೆದುಕೊಂಡಿರುವ ನಿರ್ಧಾರದಿಂದ ದೇಶದ ಆರ್ಥಿಕತೆ ಕುಂಠಿತವಾಗಿದ್ದು, ಇದರಿಂದ ಸಣ್ಣ ಹಾಗೂ ಮಧ್ಯಮ ಉದ್ಯಮಿಗಳಿಗೆ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ ಎಂದರು.
ಈ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ 7.8ರಷ್ಟು ಅಭಿವೃದ್ಧಿ (ಜಿಡಿಪಿ)ದರವಿತ್ತು. ಆದರೆ ಇದೀಗ ಅದು ಶೇ 5.7ಕ್ಕೆ ಬಂದು ನಿಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ಕೀಳು ಮಟ್ಟದ ಭಾಷೆ ಬಳಸುತ್ತಿರುವುದು ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದಲ್ಲ. ಪ್ರಧಾನಿ ಕಚೇರಿ ಘನತೆಗೆ ಧಕ್ಕೆ ತಂದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಚುನಾವಣಾ ಫಲಿತಾಂಶವು ಇಡೀ ದೇಶದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ. ಸಿದ್ದರಾಮಯ್ಯ ಅವರ ಡೈನಾಮಿಕ್ ನಾಯಕತ್ವದ ಸರ್ಕಾರ ನೀಡಿದ ಜನಪರ, ಅಭಿವೃದ್ಧಿ ಶೀಲ ಆಡಳಿತದಿಂದಾಗಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಡು ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.