ಬೆಂಗಳೂರು, ಮೇ 9- ನಾಮಪತ್ರ ಪರಿಶೀಲನೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಬೇಕೆಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಕೆ.ರವಿ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ 18 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏ.25ರಂದು ನಡೆದ ನಾಮಪತ್ರ ಪರಿಶೀಲನೆ ಪ್ರಕ್ರಿಯೆಯಲ್ಲಿ ರಿಟರ್ನಿಂಗ್ ಅಧಿಕಾರಿಯವರು ನನಗೆ ಅವಕಾಶ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾಮಪತ್ರ ಪರಿಶೀಲನೆಗೆ ಅವಕಾಶ ನೀಡದೆ ಇರುವುದು ಪ್ರಜಾಪ್ರತಿನಿಧಿ ಕಾಯ್ದೆಗೆ ವಿರುದ್ಧವಾಗಿದೆ. ಕಾಯ್ದೆ ಅನ್ವಯ ಪ್ರತಿ ಅಭ್ಯರ್ಥಿಗೆ ನಾಮಪತ್ರ ಪರಿಶೀಲನೆಗೆ ಅವಕಾಶ ನೀಡಲಾಗಿದೆ ಎಂದ ಅವರು, ಚುನಾವಣಾ ನಿಯಮದ ಅನ್ವಯ, ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಎಲ್ಲ ಅಭ್ಯರ್ಥಿಗಳು ಪ್ರಮಾಣ ಪತ್ರ ಹಾಗೂ ಹೆಚ್ಚುವರಿ ಪ್ರಮಾಣ ಪತ್ರ ಸಲ್ಲಿಸಿರಬೇಕು. ಎಲ್ಲ ಹಾಳೆಗಳಲ್ಲಿ ಸಹಿ ಮಾಡಿರಬೇಕು ಹಾಗೂ ಎಲ್ಲ ಕಾಲಂಗಳ ಪ್ರತಿಯನ್ನು ಸಲ್ಲಿಸಿರಬೇಕು. ಈ ಎಲ್ಲ ಪತ್ರಗಳ ಪರಿಶೀಲನೆಗೆ ಎಲ್ಲ ಅಭ್ಯರ್ಥಿಗೆ ಅವಕಾಶ ನೀಡಬೇಕು. ಆದರೆ, ನನಗೆ ಅವಕಾಶ ನೀಡಿಲ್ಲ ಎಂದು ತಿಳಿಸಿದರು.
ನಾಮಪತ್ರ ಪರಿಶೀಲನೆಗೆ ಅವಕಾಶ ನೀಡುವವರೆಗೂ ವಿಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಬೇಕೆಂದು ಉಚ್ಚ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.