ಶಿಕಾರಿಪುರ, ಮೇ 9-ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾವಿರಾರು ಸಂಖ್ಯೆಯ ನಕಲಿ ಮತದಾರರ ಗುರುತಿನ ಚೀಟಿಗಳು(ವೋಟರ್ ಐಡಿ) ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತಕ್ಷಣವೇ ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಅಪಾರ್ಟ್ಮೆಂಟ್ನಲ್ಲಿ 10 ಸಾವಿರ ನಕಲಿ ಮತದಾರರ ಗುರುತಿನ ಚೀಟಿ ಸಿಕ್ಕಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ. ಈ ಕೂಡಲೇ ಚುನಾವಣಾ ಆಯೋಗ ರಾಜರಾಜೇಶ್ವರಿ ನಗರದ ಚುನಾವಣೆಯನ್ನು ಮುಂದೂಡುವಂತೆ ಆಗ್ರಹಿಸಿದರು.
ರಾಜರಾಜೇಶ್ವರಿನಗರದಲ್ಲಿ ಸಿಕ್ಕಿರುವುದು ಒಂದು ಪ್ರಕರಣ ಮಾತ್ರ. ರಾಜ್ಯದ ಅನೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತರೂಢ ಕಾಂಗ್ರೆಸ್ ಈ ರೀತಿ ನಕಲಿ ಮತದಾರರನ್ನು ಸೃಷ್ಟಿಸಿ ಅಕ್ರಮ ಚುನಾವಣೆ ನಡೆಸಲು ಹೊರಟಿದೆ. ಚುನಾವಣಾ ಆಯೋಗವು ಈ ಬಗ್ಗೆ ಗಮನಹರಿಸಬೇಕೆಂದು ಮನವಿ ಮಾಡಿದರು.
ಬೆಂಗಳೂರಿನ ಯಶವಂತಪುರ, ಕೆ.ಆರ್.ಪುರಂ ಸೇರಿದಂತೆ ಅನೇಕ ಕಡೆ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ನಕಲಿ ಮತದಾರರ ಮೂಲಕ ಕಾಂಗ್ರೆಸ್ ಗೆಲ್ಲಲು ಹೊರಟಿದೆ. ಸೋಲು ಖಚಿತವಾಗಿರುವ ಹಿನ್ನೆಲೆಯಲ್ಲಿ ವಾಮಮಾರ್ಗ ಅನುಸರಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಯಡಿಯೂರಪ್ಪ ಪ್ರಶ್ನಿಸಿದರು.
ನಕಲಿ ಮತದಾರರ ಗುರುತಿನ ಚೀಟಿ ಸೃಷ್ಟಿಸುವುದರ ಜೊತೆಗೆ ಕಾಂಗ್ರೆಸಿಗರು ಹಣ, ಹೆಂಡ ಹಂಚಿ ಇಡೀ ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಾಚಾರಗೊಳಿಸಲು ಹವಣಿಸುತ್ತಿದ್ದಾರೆ. ನೀವು ಕಳೆದ ಐದು ವರ್ಷಗಳ ಅವಧಿಯಲ್ಲಿ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದರೆ ನಿಮಗೆ ಇಂಥ ಪರಿಸ್ಥಿತಿ ಬರಬಾರದಿತ್ತು ಎಂದು ಟೀಕಿಸಿದರು.
ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಯಬೇಕೆಂಬುದು ನಮ್ಮೆಲ್ಲರ ಆಶಯ. ಚುನಾವಣಾ ಆಯೋಗ ಕೆಲವು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದರೂ ಕೆಲವು ಕಡೆ ಮೃದು ಧೋರಣೆ ಅನುಸರಿಸುತ್ತದೆ ಎಂಬ ಆರೋಪಗಳು ಕೇಳಿಬರುತ್ತವೆ. ನಿಮಗಿರುವ ಅಧಿಕಾರವನ್ನು ಚಲಾಯಿಸಲು ಯಾವ ಕೈಗಳು ಅಡ್ಡಿಯಾಗಿವೆ ಎಂದು ಯಡಿಯೂರಪ್ಪ ಪ್ರಶ್ನಿಸಿದರು.
ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ನಾವೇ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವುದು ಖಚಿತ ಎಂದು ಹೇಳಿದರು.