ಬೆಂಗಳೂರು:ಮೇ-10: ರಾಜರಾಜೇಶ್ವರಿ ನಗರದಲ್ಲಿ ಅಕ್ರಮ ವೋಟರ್ ಐಡಿಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುನಿರತ್ನ ಸೇರಿದಂತೆ 14 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಶಾಸಕ ಮುನಿರತ್ನ 14ನೇ ಆರೋಪಿಯಾಗಿದ್ದಾರೆ.
ಚುನಾವಣಾಧಿಕಾರಿಗಳು ದಾಳಿ ನಡೆಸಿದ ವೇಳೆ ರಾಶಿ ರಾಶಿ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಜತೆಗೆ ಈ ವೇಳೆ ಶಾಸಕ ಮುನಿರತ್ನ ಅವರ ಪಾಂಪ್ಲೆಟ್ಗಳು ಸಿಕ್ಕಿದ್ದವು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ನೀಡಿದ್ದ ದೂರಿನ ಆಧಾರದ ಮೇಲೆ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವೋಟರ್ ಐಡಿಗಳು ಪತ್ತೆಯಾದ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರೇ ಕಾರಣ ಎಂದು ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಆರೋಪಿಸಿದ್ದರು. ಈಗ ಎಫ್ಐಆರ್ ದಾಖಲಾಗಿದ್ದು, ಚುನಾವಣಾಧಿಕಾರಿಗಳು ಮತ್ತು ಪೊಲೀಸರು ಜಂಟಿ ತನಿಖೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸರು ಯಶವಂತಪುರ ಕಾಂಗ್ರೆಸ್ ಕಾರ್ಪೊರೇಟರ್ ಜಿ.ಕೆ.ವೆಂಕಟೇಶ್ ಮತ್ತು ರಘು ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದರ ಜೊತೆಗೆ ವೋಟರ್ ಐಡಿಗಳು ದೊರೆತ ಸ್ಥಳದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಏಳಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.