ಬೆಂಗಳೂರು:ಮೇ-15: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಸಂಬಂಧ ಎರಡೂ ಪಕ್ಷಗಳ ನಾಯಕರು ಚರ್ಚೆ ನಡೆಸುತ್ತಿದ್ದು, ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸೋನಿಯಾ ಗಾಂಧಿಯವರು ಈಗಗಲೇ ದೂರವಾಣಿ ಮೂಲಕ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರೊಂದಿಗೆ ಚರ್ಚೆ ನಡೆಸಿದ್ದು, ಮೈತ್ರಿ ಸರ್ಕಾರ ರಚೆನೆ ಸಂಬಂಧ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಜನರು ಬಹುಮತ ನೀಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ನಾವು ಗೌರವಿಸಲೇಬೇಕಾಗುತ್ತದೆ. ಜನರ ತೀರ್ಪನ್ನು ನಾವು ಸಂಪೂರ್ಣವಾಗಿ ಒಪ್ಪಿಕೊಂಡಿದ್ದೇವೆ. ಈ ನಿಟ್ಟಿನಲ್ಲಿ ಜೆಡಿಎಸ್ ಜತೆ ಸೇರಿ ಸರ್ಕಾರ ರಚನೆ ಮಾಡಲು ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ನಾವು ಜೆಡಿಎಸ್ ಬೆಂಬಲಿಸಲು ಸಿದ್ಧರಿದ್ದು, ಈಗಾಗಲೇ ನಮ್ಮ ನಾಯಕರು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಒಪ್ಪಿದ್ದಾರೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್, ಜನಾದೇಶವನ್ನು ನಾವು ಒಪ್ಪುತ್ತೇವೆ. ಕಾಂಗ್ರೆಸ್ ಗೆ ಮತ ನೀಡಿದ ಎಲ್ಲರಿಗೂ ಧನ್ಯವಾದಗಳು. ಜೆಡಿಎಸ್ ಗೆ ಬೆಂಬಲ ನೀಡಲು ಎಐಸಿಸಿ ಸಮ್ಮತಿ ಸೂಚಿಸಿದ್ದು, ಈ ನಿಟ್ಟಿನಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ತಿಳಿಸಿದರು.