ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಹಿನ್ನಲೆ: ಜೆಡಿಎಸ್ ಜತೆ ಮೈತ್ರಿ ಮಾಡಿಕೊಂದು ಸರ್ಕಾರ ರಚಿಸಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಮೇ-15; ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈಬಾ ಅತಂತ್ರ ಸ್ಥಿತಿ ನಿರ್ಮಾಣವಾಗುವುದರಿಂದ ಅಧಿಕಾರ ಉಳಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಮಾಡಲು ನಿರ್ಧರಿಸಿದೆ.

ಬಿಜೆಪಿ 104, ಕಾಂಗ್ರೆಸ್ 77, ಜೆಡಿಎಸ್, 39, ಇತರೆ-2 ಸ್ಥಾನಗಳನ್ನು ಪಡೆದುಕೊಂಡಿದ್ದು, ಯಾವುದೇ ಪಕ್ಷಕ್ಕೂ ಸರಳ ಬಹುಮತ ಸಿಗಲಿಲ್ಲ. ಅತಂತ್ರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಕೊನೆಯ ಕ್ಷಣದ ಕಸರತ್ತು ನಡೆಸುತ್ತಿದೆ.

ಸದ್ಯದ ಪರಿಸ್ಥಿತಿಯ ಅವಲೋಕನ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ನಾಯಕರ ಜತೆ ಜೆಡಿಎಸ್ ಜತೆ ಮೈತ್ರಿ ಕುರಿತಂತೆ ಚರ್ಚೆ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನ ನಾಯಕರು ಜೆಡಿಎಸ್ ನಾಯಕರ ಜತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸಂಜೆ ಕಾಂಗ್ರೆಸ್ ನಾಯಕರು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಭೇಟಿಯಾಗಿ ಮಾತನಾಡಲಿದ್ದಾರೆ. ಈ ನಿಟ್ಟಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಈಬಾರಿ ಮುಖ್ಯಮಂತ್ರಿ ಪಟ್ಟ ಒಲಿಯಲಿದೆ ಎಂಬ ಮಾಹಿತಿಯಿದೆ.

ಇನ್ನು ಮೈತ್ರಿ ಕುರಿತಂತೆ ಕೇಂದ್ರ ನಾಯಕರಾದ ಗುಲಾಂ ನಬಿ ಆಜಾದ್, ಅಶೋಕ್ ಗೆಹ್ಲೋಟ್, ಕೆಸಿ ವೇಣುಗೋಪಾಲ್ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ