ಬೆಂಗಳೂರು, ಮೇ16- ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿರುವ ಬಿಜೆಪಿ ಒಂದು ಕಡೆ ಹಾಗೂ ಜೆಡಿಎಸ್ ಹಾಗೂ ಕಾಂಗ್ರೆಸ್ ಮತ್ತೊಂದು ಕಡೆ ಸರ್ಕಾರ ರಚನೆಗೆ ರಾಜ್ಯಪಾಲರ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಸಂದಿಗ್ಧ ಪರಿಸ್ಥಿತಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಕಾನೂನು ತಜ್ಞರ ಸಲಹೆ ಪಡೆಯಲಾಗುತ್ತಿದೆ.
ಒಂದೆಡೆ ಬಿಜೆಪಿ ಅತಿಹೆಚ್ಚು ಶಾಸಕರನ್ನು ಹೊಂದಿದ್ದು ತಮಗೆ ಅಧಿಕಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ, ಮತ್ತೊಂದೆಡೆ ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡೂ ಸಮ್ಮಿಶ್ರವಾಗಿ ಸರ್ಕಾರ ರಚಿಸಿದರೆ ಸರಳ ಬಹುಮತಕ್ಕಿಂತ ಹೆಚ್ಚಿನ ಸ್ಥಾನ ಇರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಯಾವ ರೀತಿಯ ನಿಲುವು ತಾಳಬೇಕು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಒಂದು ಹಂತದಲ್ಲಿ ಎಲ್ಲ ರೀತಿಯ ಸಾಧಕ-ಬಾಧಕಗಳನ್ನು ಅವಲೋಕಿಸಿ ಸೂಕ್ತ ನಿರ್ಧಾರ ಮಾಡಲು ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆಯುತ್ತಿದ್ದಾರೆ.
ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸಲು ಅವಕಾಶ ಕಲ್ಪಿಸುವ ಮುನ್ನ ಯಾವ ನಡೆ ಅನುಸರಿಸಬೇಕು ಎಂಬ ಬಗ್ಗೆ ಕಾನೂನು ತಜ್ಞರೊಂದಿಗೆ ಸೂಕ್ಷ್ಮಾವಲೋಕನ ನಡೆಸಲಾಗುತ್ತಿದೆ.