ಬೆಂಗಳೂರು, ಮೇ 16-ಸರ್ಕಾರ ರಚನೆಯ ಹಕ್ಕು ಮಂಡಿಸಿರುವ ಜೆಡಿಎಸ್, ಕಾಂಗ್ರೆಸ್ ತಮಗೆ ಅವಕಾಶ ನಿರಾಕರಿಸಿದರೆ ಸುಮಾರು ಒಂದು ಲಕ್ಷ ಜನ ಸೇರಿಸಿ ರಾಜಭವನದ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದೆ.
ಕರ್ನಾಟಕ ರಾಜಕೀಯ ಬೆಳವಣಿಗೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದು, ಮುಂದಿನ ದಿನಗಳಲ್ಲಿ ದೇಶದ ರಾಜಕೀಯವನ್ನು ನಿರ್ಣಯಿಸಲಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗರಿಷ್ಠ ಪ್ರಮಾಣದ ಹೋರಾಟಕ್ಕೆ ಸಿದ್ಧತೆ ನಡೆಸಿವೆ.
ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದು, ಚೆಂಡು ರಾಜ್ಯಪಾಲರ ಅಂಗಳದಲ್ಲಿದೆ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿದರೆ ಹೆಚ್ಚು ಶಾಸಕರ ಸಂಖ್ಯಾಬಲವನ್ನು ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತಿಭಟನೆ ಹಾದಿ ಹಿಡಿಯಲು ಮುಂದಾಗಿದೆ.
ಕಾಂಗ್ರೆಸ್ ಈಗಾಗಲೇ ರಾಜ್ಯದ ನಾನಾ ಭಾಗಗಳಿಂದ ಬೆಂಗಳೂರಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಆಹ್ವಾನಿಸಿದೆ. ಇಂದು ನಾಳೆಯೊಳಗಾಗಿ ರಾಜ್ಯಪಾಲರು ಕಾನೂನಾತ್ಮಕ ನಿರ್ಧಾರ ತೆಗೆದುಕೊಳ್ಳದೆ ಹೋದರೆ ಪ್ರತಿಭಟನೆ ಮಾರ್ಗ ಹಿಡಿಯಲು ಯೋಜನೆ ರೂಪಿಸಲಾಗಿದೆ.