ಬೆಂಗಳೂರು, ಮೇ 16- ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸರ್ಕಾರ ರಚಿಸಲು ತಂತ್ರ-ಪ್ರತಿತಂತ್ರ ರೂಪಿಸುತ್ತಿವೆ.
38 ಸ್ಥಾನ ಪಡೆದಿರುವ ಜೆಡಿಎಸ್ಗೆ, 78 ಸ್ಥಾನ ಪಡೆದಿರುವ ಕಾಂಗ್ರೆಸ್ ಬೆಂಬಲ ನೀಡಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ತಂತ್ರ ರೂಪಿಸಿರುವ ಬೆನ್ನಲ್ಲೇ 104 ಸ್ಥಾನ ಪಡೆದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಪ್ರತಿತಂತ್ರ ರೂಪಿಸುತ್ತಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸುತ್ತಿದೆ.
ಜೆಡಿಎಸ್ಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದ್ದರೂ ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಅವರು ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದಾರೆ.
ಇದರ ಬೆನ್ನಲ್ಲೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾಗಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಮಗೆ ಸರ್ಕಾರ ರಚಿಸಲು ಆಹ್ವಾನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟರೆ ಆಪರೇಷನ್ ಕಮಲ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನಕ್ಕೆ ಕೈ ಹಾಕಿದ್ದು, ಒಗ್ಗಟ್ಟು ಕಾಪಾಡಿಕೊಳ್ಳಲು ರೆಸಾರ್ಟ್ನತ್ತ ಪ್ರಯಾಣ ಬೆಳೆಸಿದ್ದಾರೆ.
ಆದರೂ ಗುಟ್ಟು ಬಿಟ್ಟುಕೊಡದ ಬಿಜೆಪಿ ಮುಖಂಡರು ಕಾಂಗ್ರೆಸ್ ಮತ್ತು ಜೆಡಿಎಸ್ನ ಶಾಸಕರಿಂದ ರಾಜೀನಾಮೆ ಕೊಡಿಸುವ ತಂತ್ರಕ್ಕೆ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ ಬಿಜೆಪಿಯ ಆಪರೇಷನ್ ಕಮಲಕ್ಕೆ ಪ್ರತಿತಂತ್ರ ರೂಪಿಸಿರುವ ಕಾಂಗ್ರೆಸಿಗರು ಬಿಜೆಪಿಯ ಶಾಸಕರನ್ನು ಸೆಳೆಯುವ ಸಾಹಸಕ್ಕೆ ಕೈ ಹಾಕಿದೆ ಎನ್ನಲಾಗಿದೆ.
ಬಿಜೆಪಿ ಮರ್ಮ ಅರಿತಿರುವ ಕಾಂಗ್ರೆಸ್ ಹೈಕಮಾಂಡ್ ಆಪರೇಷನ್ ಬಿಜೆಪಿ ಕಾರ್ಯಾಚರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಕೇಸರಿ ಶಾಸಕರನ್ನು ಸೆಳೆಯುವ ಹೊಣೆಯನ್ನು ಶಾಸಕ ಎಂ.ಬಿ.ಪಾಟೀಲ್ ಅವರಿಗೆ ವಹಿಸಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಗೆ ಯಾವುದೇ ವಿಘ್ನ ಉಂಟಾಗದಂತೆ ನೋಡಿಕೊಳ್ಳುವ ಹೊಣೆಯನ್ನು ಡಿ.ಕೆ.ಶಿವಕುಮಾರ್ ಮತ್ತು ಡಾ.ಜಿ.ಪರಮೇಶ್ವರ್ ಅವರಿಗೆ ವಹಿಸಲಾಗಿದೆ.
ಇನ್ನೇನು ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುವುದು ಖಚಿತ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದೆ ಎಂಬ ಮಾಹಿತಿ ಹೊರಬಿದ್ದಿದ್ದು, ಒಂದು ಮೂಲದ ಪ್ರಕಾರ, ನಾಳೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ನಡೆ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಮೋದಿ ಮತ್ತು ಷಾ ಅವರು ಸರ್ಕಾರ ರಚನೆಗೆ ಅಗತ್ಯವಾದ ಚಾಣಾಕ್ಷತನ ಪ್ರದರ್ಶಿಸುವ ಸಾಧ್ಯತೆ ಇದೆ ಎಂಬ ಗುಮಾನಿ ಕಾಡುತ್ತಿದೆ.
ಒಟ್ಟಾರೆ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಣಯದ ಮೇಲೆ ರಾಜ್ಯದಲ್ಲಿ ಯಾವ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂಬುದು ತೀರ್ಮಾನವಾಗಲಿದೆ.