ನೂತನ ಶಾಸಕರ ಪ್ರಮಾಣವಚನ ಸ್ವೀಕಾರ: ಮೂವರ ಗೈರು, ಕಲಾಪ 3.30ಕ್ಕೆ ಮುಂದೂಡಿಕೆ

ಬೆಂಗಳೂರು,ಮೇ 19

15ನೇ ವಿಧಾನಸಭೆಯ ಚೊಚ್ಚಲ ಅಧಿವೇಶನ ನಿಗದಿಯಂತೆ ಶನಿವಾರ ಬೆಳಗ್ಗೆ 11ಗಂಟೆಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೊದಲಿಗೆ ಸಿಎಂ ಬಿಎಸ್ ಯಡಿಯೂರಪ್ಪ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಸದನಕ್ಕೆ ಆಗಮಿಸಿದ್ದ ಎಲ್ಲಾ ಶಾಸಕರ ಪ್ರಮಾಣವಚನ ಮುಕ್ತಾಯಗೊಂಡಿದ್ದು, ಮೂವರು ಶಾಸಕರ ಪ್ರಮಾಣವಚನ ಮಾತ್ರ ಬಾಕಿ ಉಳಿದಿದೆ.  ಕಲಾಪವನ್ನು ಮಧ್ಯಾಹ್ನ 3.30ಕ್ಕೆ ಮುಂದೂಡಲಾಗಿದೆ.

ಬಳಿಕ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ, ಕಾಂಗ್ರೆಸ್ , ಜೆಡಿಎಸ್ ಸೇರಿದಂತೆ ಎಲ್ಲಾ ಶಾಸಕರು ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡ ಕುಮಾರಸ್ವಾಮಿ, ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರು ಎಲ್ಲಾ ಶಾಸಕರಿಗೂ ಪ್ರತಿಜ್ಞಾವಿಧಿ ಬೋಧಿಸಿದರು.

ವಿಪ್ ಜಾರಿ:

ಸಂಜೆ 4ಗಂಟೆಗೆ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಎಲ್ಲಾ ಶಾಸಕರಿಗೂ ವಿಪ್ ಜಾರಿ ಮಾಡಿದೆ.

ಕಾಂಗ್ರೆಸ್ ನ ವಿಜಯನಗರ ಕ್ಷೇತ್ರ ಶಾಸಕ ಆನಂದ್ ಸಿಂಗ್, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ಸದನದ ಕಲಾಪಕ್ಕೆ ಗೈರುಹಾಜರಾಗಿದ್ದಾರೆ. ಕಲಾಪದಲ್ಲಿ ಬಿಜೆಪಿಯ 104 ಶಾಸಕರು, ಕಾಂಗ್ರೆಸ್ ಪಕ್ಷದ 76, ಜೆಡಿಎಸ್ ನ 37 ಹಾಗೂ ಇಬ್ಬರು ಪಕ್ಷೇತರ ಶಾಸಕರು ಹಾಜರಾಗಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ