ಚೆನ್ನೈ;ಮೇ-20: ಕರ್ನಾಟಕದಲ್ಲಿ ನಡೆದ ರಾಜಕೀಯ ವಿದ್ಯಮಾನಗಳು, ಚಟುವಟಿಕೆಗಳು ಪ್ರಜಾಪ್ರಭುತ್ವದ ಗೆಲುವು ಎಂದು ಹಿರಿಯ ನಟ, ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.
ಕರ್ನಾಟಕ ರಾಜಕೀಯ ಚಟುವಟಿಕೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ರಜನಿಕಾಂತ್, ಸುಪ್ರೀಂ ಕೋರ್ಟ್ ತೀರ್ಪಿನಂತೆ ವಿಶ್ವಾಸಮತ ಸಾಬೀತುಪಡಿಸಲಾಗದೆ ಯಡಿಯೂರಪ್ಪನವರು ರಾಜೀನಾಮೆ ನೀಡಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ರಚನೆಗೆ ಅನುವು ಮಾಡಿಕೊಟ್ಟದ್ದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಹೆಚ್ಚಿನ ಕಾಲಾವಕಾಶವನ್ನು ಬಿಜೆಪಿ ಕೇಳಿರುವುದು ಮತ್ತು ರಾಜ್ಯಪಾಲರು 15 ದಿನಗಳ ಕಾಲಾವಕಾಶ ನೀಡಿದ್ದು ಪ್ರಜಾಪ್ರಭುತ್ವವನ್ನು ಅಣಕಿಸುವ ರೀತಿಯಲ್ಲಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿಹಿಡಿದು ತೀರ್ಪುಕೊಟ್ಟ ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದರು.
ಇನ್ನು ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಯೇ ಇಲ್ಲವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ಇನ್ನೂ ಪಕ್ಷವನ್ನು ಹುಟ್ಟುಹಾಕಿಲ್ಲ, ಆದರೆ ನಾವು ಯಾವುದಕ್ಕೂ ಸಿದ್ದವಾಗಿದ್ದೇವೆ. ಈಗಲೇ ಯಾವುದೇ ಮೈತ್ರಿ ಬಗ್ಗೆ ಹೇಳುವುದು ಬಹಳ ಬೇಗವಾಗುತ್ತದೆ ಎಂದುಹೇಳಿದ್ದಾರೆ.