ತುಮಕೂರು,ಮೇ 21-ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಥಾನ ಕೈ ತಪ್ಪಿರುವುದಕ್ಕೆ ಹಾಲನೂರು ಲೇಪಾಕ್ಷಿ ಕಣ್ಣೀರು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ,ರಾಜ್ಯಾಧ್ಯಕ್ಷ ಯಡಿಯೂರಪ್ಪ , ಜಿಲ್ಲಾಧ್ಯಕ್ಷ ಜಿ.ಪಿ.ಜ್ಯೋತಿಗಣೇಶ್ ಅವರು ಈ ಕ್ಷೇತ್ರದ ಆಕಾಂಕ್ಷಿಯಾಗಿದ್ದ ತಮ್ಮನ್ನು ಅಭ್ಯರ್ಥಿಯನ್ನಾಗಿ ಸೂಚಿಸಿದ್ದರು. ಆದರೆ ಇದ್ದಕ್ಕಿದ್ದ ಹಾಗೆ ಈ ಸ್ಥಾನಕ್ಕೆ ವೈ.ಎ.ನಾರಾಯಣಸ್ವಾಮಿ ಅವರನ್ನು ನಿನ್ನೆ ನಿಯೋಜಿಸಿರುವುದರಿಂದ ಸಾಕಷ್ಟು ಮುಜುಗರ ಉಂಟಾಗಿದೆ ಎಂದು ಭಾವುಕರಾಗಿ ನುಡಿದರು.
ತಮ್ಮ ಬದಲಿಗೆ ವೈ.ಎ.ನಾರಾಯಣಸ್ವಾಮಿ ಅವರಿಗೆ ಸ್ಥಾನ ನೀಡಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಕಳೆದ ಒಂದು ತಿಂಗಳಿನಿಂದ ಚಿತ್ರದುರ್ಗ, ತುಮಕೂರು, ಕೋಲಾರ ಸೇರಿದಂತೆ ವಿವಿಧೆಡೆ ಪ್ರವಾಸ ಕೈಗೊಂಡು ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದೆ. ಮತದಾರರಿಂದ ತಮಗೆ ಬೆಂಬಲವೂ ವ್ಯಕ್ತವಾಗಿತ್ತು. ಆದರೆ ಏಕಾಏಕಿ ತಮ್ಮನ್ನು ಆ ಸ್ಥಾನದಿಂದ ತೆರವುಗೊಳಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಬದಲಾವಣೆಗಳಿಂದ ತಮಗೆ ಸಾಕಷ್ಟು ನೋವುಂಟಾಗಿದೆ. ಯಾವುದೇ ಮುನ್ಸೂಚನೆ ನೀಡದೆ ಅಭ್ಯರ್ಥಿ ಬದಲಿಸಿರುವುದು ಸರಿಯಲ್ಲ ಎಂದು ಹೇಳಿದರು.