ತೂತುಕುಡಿ:ಮೇ-22: ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಕಾರ್ಯಾಚರಣೆ ನಿಲ್ಲಿಸುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ನೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಗೋಲಿಬಾರ್ ನಿಂದಾಗಿ 8 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಉದ್ರಿಕ್ತ ಪ್ರತಿಭಟನಾಕಾರರು, ಜಿಲ್ಲಾಡಳಿ ಕಚೇರಿ ಹಾಗೂ ಸ್ಟರ್ಲೈಟ್ ನೌಕರರ ವಸತಿ ಗೃಹಗಳಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು,
ಕಾನೂನು ವಿಭಾಗದ ಎಡಿಜಿಪಿ ಹೆಚ್ಚುವರಿ ಬೆಟಲಿಯನ್ ನೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಹರಸಾಹಸಪಟ್ಟರು, ತಾಮ್ರ ಮಿಶ್ರಿತ ಘಟಕ ಸ್ಟೆರ್ಲೈಟ್ ಕಂಪನಿ ವಿರೋಧಿಸಿ ನೂರಾರು ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಇಡೀ ತೂತುಕುಡಿ ಪಟ್ಟಣ ಸ್ತಬ್ದಗೊಂಡಿತ್ತು.
ಕಲಂ 144 ರ ಅನ್ವಯ ಜಿಲ್ಲಾಧಿಕಾರಿ ಎನ್. ವೆಂಕಟೇಶ್ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಹಳೆ ಬಸ್ ನಿಲ್ದಾಣದ ಬಳಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿತ್ತು. ಆದರೆ. ಮದಾತೂರು, ಸೆಂಟ್ ಲೇಡಿ ಸ್ಟೋಸ್ ಚರ್ಚ್ ಮತ್ತಿತರ ಕಡೆಗಳಲ್ಲಿ ಸಾರ್ವಜನಿಕರು ಸೇರಿ ಸ್ಟೆರ್ಲೈಟ್ ಕಂಪನಿ ಮುಚ್ಚುವಂತೆ ಒತ್ತಾಯಿಸಿದರು. ಮುಂಜಾಗ್ರತಾ ಕ್ರಮವಾಗಿ ಸುಮಾರು 4 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಆದರೆ, ಪ್ರತಿಭಟನಾಕಾರರು ಬ್ಯಾರಿಕೇಡ್ ಗಳನ್ನು ಮುರಿದು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಪ್ರಯತ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಆದಾಗ್ಯೂ, ಜನರನ್ನು ನಿಯಂತ್ರಿಸುವುದು ಕಷ್ಟವಾದಾಗ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂಸಾಚಾರದ ವೇಳೆ ಎರಡು ಪೊಲೀಸ್ ಜೀಪ್ ಗಳಿಗೆ ಬೆಂಕಿ ಹಚ್ಚಲಾಗಿದ್ದು, 10ಕ್ಕೂ ಹೆಚ್ಚು ಪೊಲೀಸ್ ವಾಹನಗಳಿಗೆ ಹಾನಿ ಮಾಡಲಾಗಿದೆ.