ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ನಾಡ ಅಧಿ ದೇವತೆ ಶ್ರೀ ಚಾಮುಂಡೇಶ್ವರಿಗೆ ಹೆಚ್ ಡಿ ಕುಮಾರಸ್ವಾಮಿ ವಿಶೇಷ ಪೂಜೆ

ಮೈಸೂರು:ಮೇ-22: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ನಾಳೆ ಸಂಜೆ 4.30ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣ ಸ್ವೀಕರಿಸುವ ಸಮಾರಂಭ ನಿಗದಿಯಾಗಿದ್ದು, ಇದಕ್ಕೂ ಮುನ್ನ ನಾಡ ಅಧಿ ದೇವತೆ ಚಾಮುಂಡಿ ತಾಯಿಗೆ ಬೆಳಗ್ಗೆ 8.45ರ ಶುಭ ಲಗ್ನದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಲಲಿತ್ ಮಹಲ್ ಹೆಲಿಪ್ಯಾಡ್‌‌ಗೆ ಆಗಮಿಸಲಿರುವ ಕುಮಾರಸ್ವಾಮಿ, ನಂತರ ಅಲ್ಲಿಂದ ನೇರವಾಗಿ ನಾಡ ಅಧಿ ದೇವತೆ ಶ್ರೀ ಚಾಮುಂಡೇಶ್ವರಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಪೂಜೆ ಬಳಿಕ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಳೆದ ವರ್ಷ ನ. 7 ರಂದು ಚಾಮುಂಡಿ ಬೆಟ್ಟದಲ್ಲಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡರ ಕುಟುಂಬ ಇಲ್ಲಿಂದಲೇ ‘ಕುಮಾರ ಪರ್ವ’ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡಿತ್ತು.
ನಂತರ ಲಿಂಗದೇವರಕೊಪ್ಪಲಿನಲ್ಲಿ ಜೆಡಿಎಸ್‌‌ ಪಕ್ಷದ ಬೃಹತ್ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಲಾಗಿತ್ತು. ಈಗ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದು ದೈವ ಬಲದಿಂದ ಎಂದು ನಂಬಿರುವ ಕುಮಾರಸ್ವಾಮಿ, ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ನಂತರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ