ಬೆಂಗಳೂರು: ಮೇ-23:ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿ ಕನ್ನಡ ನಾಡಿನ ಜನರು ಹಾಗೂ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಬಾಯಿ ವಾಲಾ ಪ್ರತಿಜ್ನಾವಿಧಿಯನ್ನು ಬೋಧಿಸಿದರು.
ಇದೇ ವೇಳೆ ಡಾ.ಜಿ ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರತಿಜ್ನಾವಿಧಿ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕಾರದ ಬಳಿಕ ನೂತನ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ನೂತನ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ರಾಜ್ಯಪಾಲ ವಾಜುಬಾಯಿ ವಾಲ ಹೂ ಗುಚ್ಛ ನೀಡಿ ಶುಭ ಹಾರೈಸಿದರು.
ಹೆಚ್ ಡಿ ಕುಮಾರಸ್ವಾಮಿ ಪ್ರತಿಜ್ನಾವಿಧಿ ಸಮಾರಂಭಕ್ಕೆ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ ಪಿ ನಾಯಕಿ ಮಾಯಾವತಿ, ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಕೇರಳ ಸಿಎಂ ಪಿಣರಾಯಿ ವಿಜಯನ್, ಸಮಾಜವಾದಿ ಪಾರ್ಟಿ ಮುಖಂಡ, ಮಾಜಿ ಸಿಎಂ ಅಖಿಲೇಶ್ ಯಾದವ್, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್, ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮ ಒಂದು ರೀತಿಯಲ್ಲಿ ತೃತೀಯ ರಂಗದ ಶಕ್ತಿ ಪ್ರದರ್ಶನ ವೇದಿಕೆಯಾಗಿ ಪರಿಣಮಿಸಿದ್ದು, ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಒಂದು ವಿಶೇಷ ಸಂದೇಶ ರವಾನಿಸಿದಂತಿತ್ತು.
ಸಮಾರಂಭಕ್ಕೆ ಬಿಜೆಪಿ ನಾಯಕರು ಗೈರಾಗಿದ್ದರು.