
ಬೆಂಗಳೂರು, ಮೇ 26-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದರು.
ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ನಿರಂತರ ರಾಜಕೀಯ ಚಟುವಟಿಕೆಗಳಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದರು.
ಕಳೆದ 10 ದಿನಗಳಿಂದ ಕಾಂಗ್ರೆಸ್ ನಾಯಕರು ಹಾಗೂ ಶಾಸಕರೊಂದಿಗೆ ನಿರಂತರ ಸಮಾಲೋಚನೆ, ಸಭೆಗಳು ಮತ್ತಿತರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಲ್ಲದೆ, ಮಠಾಧೀಶರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.
ನಿನ್ನೆ ವಿಧಾನಸಭೆಯಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ವಿಶ್ವಾಸ ಮತ ಸಾಬೀತು ಪಡಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ.
ಇಂದು ಯಾವುದೇ ಅಧಿಕೃತ, ಪೂರ್ವ ನಿಯೋಜಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿಲ್ಲ.