ಮಳೆ ಇನ್ನೂ ಮೂರು ದಿನ

ಬೆಂಗಳೂರು, ಮೇ 26-ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ.
ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತ ನೇರ ಪರಿಣಾಮ ರಾಜ್ಯದ ಮೇಲೆ ಬೀರಿಲ್ಲ. ಆದರೆ ಅರಬ್ಬೀ ಸಮುದ್ರದಲ್ಲಿ ಎತ್ತರದ ಅಲೆಗಳು ಕಂಡುಬಂದಿವೆ. ನಾಳೆ ವೇಳೆಗೆ ಚಂಡಮಾರುತದ ದುರ್ಬಲಗೊಳ್ಳಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.
ಮುಂಗಾರುಪೂರ್ವ ಮಳೆ ಕೊಡಗು, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ದಕ್ಷಿಣ ರಾಜ್ಯದ ಹಲವು ಭಾಗಗಳಲ್ಲಿ ಬೀಳುತ್ತಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ ಎಂದರು.
ಈ ಬಾರಿಯ ಮೇ ತಿಂಗಳಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ. ನೈರುತ್ಯ ಮುಂಗಾರು ಮಳೆಯು ಸಕಾಲದಲ್ಲಿ ಆಗಮಿಸುವ ನಿರೀಕ್ಷೆ ಇದೆ. ಮೇ 29ಕ್ಕೆ ಕೇರಳ ಕರಾವಳಿಯನ್ನು ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದ್ದು, ಆನಂತರ ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಕಾಲಿಡಲಿದೆ ಎಂದು ಹೇಳಿದರು.
ನಿನ್ನೆ ಮಧ್ಯಾಹ್ನದಿಂದ ರಾತ್ರಿಯವರೆಗೂ ರಾಜ್ಯದ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ನಿರಂತರವಾಗಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತವಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ