ನವದೆಹಲಿ, ಮೇ 26-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಇಂದು ನಾಲ್ಕನೇ ವರ್ಷಾಚರಣೆ ಆಚರಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷ ದೇಶಾದ್ಯಂತ ವಿಶ್ವಾಸಘಾತುಕ ದಿನವನ್ನಾಗಿ ಆಚರಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಇದೇ ಮೊದಲಾದ ವಿಷಯಗಳ ಬಗ್ಗೆ ಕೇಂದ್ರದ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
ರಾಜಧಾನಿ ನವದೆಹಲಿ ಸೇರಿದಂತೆ ದೇಶದ 20 ಮಹಾನಗರಗಳಲ್ಲಿ ಇಂದು ವಿಶ್ವಾಸಘಾತುಕ ದಿನಾಚರಣೆ ಆಚರಿಸಲಾಗಿದೆ. ಈ ನಗರಗಳಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಮುಖಂಡರು ಮೋದಿ ಸರ್ಕಾರದ ವೈಫಲ್ಯಗಳನ್ನು ವಿವರಿಸಿದರು.
ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಧುರೀಣರಾದ ಗುಲಾಮ್ ನಬಿ ಆಜಾದ್, ಅಶೋಕ್ ಗೆಹ್ಲೋಟ್, ರಣದೀಪ್ಸುರ್ಜೆವಾಲಾ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಮೋದಿ ವಿರುದ್ಧ ಹರಿಹಾಯ್ದರು.
ದೇಶದ ವಿವಿಧ ರಾಜ್ಯಗಳಲ್ಲೂ ಪ್ರಾದೇಶಿಕ ಪಕ್ಷಗಳು ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿವೆ. ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ಪಿ ನಾಯಕಿ ಮಾಯಾವತಿ, ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆ ನಿರಾಶದಾಯಕ ಎಂದು ಬಣ್ಣಿಸಿದರು.