ಬೆಂಗಳೂರು, ಮೇ 27- ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕೇಂದ್ರದೊಂದಿಗೆ ಉತ್ತಮ ಸಂಬಂಧ ಹೊಂದುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಡುತ್ತಿದ್ದು, ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಭೇಟಿಗೂ ಸಮಯಾವಕಾಶ ಕೋರಿದ್ದೇನೆ ಎಂದು ತಿಳಿಸಿದರು.
ಇಂದು ರಾತ್ರಿ ದೆಹಲಿಗೆ ತೆರಳತ್ತಿದ್ದು ನಾಳೆ ರಾತ್ರಿ ಹಿಂದಿರುಗುತ್ತಿದ್ದೇನೆ. ರಾಜ್ಯದ ಅಭಿವೃದ್ಧಿ ಸೇರಿದಂತೆ ಇನ್ನಿತರ ಜವಾಬ್ದಾರಿ ನನ್ನ ಮೇಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಂದ ಯಾವುದೇ ರೀತಿಯ ಕರೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಹುಲ್ ಗಾಂಧಿ ಅವರು ವಿದೇಶಕ್ಕೆ ತೆರಳುತ್ತಿದ್ದು ಅವರಿಗೂ ಶುಭಾಷಯ ಕೋರಿದ್ದೇನೆ ಎಂದರು.
ಸಚಿವ ಸಂಪುಟ ರಚನೆ ಸಂಬಂಧ ಸೋನಿಯಾ ಹಾಗು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂಬ ವದಂತಿ ಸುಳ್ಳು. ಕಾಂಗ್ರೆಸ್ ಪಕ್ಷದಿಂದ ಯಾರು ಸಂಪುಟ ಸೇರುತ್ತಾರೆ ಎಂಬುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಮತ್ತಿತರರು ಪಕ್ಷದ ಇತರೆ ನಾಯಕರೊಂದಿಗೆ ಮಾತನಾಡಿ ನಿರ್ಧರಿಸುತ್ತಾರೆ ಎಂದು ಹೇಳಿದರು.