ಬೆಂಗಳೂರು, ಮೇ 27- ಹೈದರಾಬಾದ್ ಕರ್ನಾಟಕಕ್ಕೆ ಒಂದು, ಉತ್ತರ ಕರ್ನಾಟಕಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.
ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಮಲಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಹೈದರಾಬಾದ್ ಕರ್ನಾಟಕ ಹಾಗೂ ಉತ್ತರ ಕರ್ನಾಟಕವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು ಎಂದು ಒತ್ತಾಯಿಸಿದರು.
ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕಾದರೆ ಎರಡು ಉಪಮುಖ್ಯಮಂತ್ರಿ ಸ್ಥಾನಗಳನ್ನು ಕೊಡಬೇಕೆಂದು ಹಾಗೂ ಹೈದರಾಬಾದ್ ಕರ್ನಾಟಕದ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಆಗ್ರಹಿಸಿದರು.
ಬಂದ್ಗೆ ಬೆಂಬಲ ಇಲ್ಲ: ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿಯವರು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ಗೆ ನಮ್ಮ ಬೆಂಬಲ ಇಲ್ಲ ಎಂದು ಇದೇ ವೇಳೆ ವಾಟಾಳ್ ನಾಗರಾಜ್ ತಿಳಿಸಿದರು.
ಬಿಜೆಪಿಯವರು ಬಂದ್ಗೆ ಕರೆ ನೀಡಿರುವ ವಿಚಾರ ನಮಗೆ ಗೊತ್ತೇ ಇಲ್ಲ. ನಾಳೆ ಯಡಿಯೂರಪ್ಪ ಅವರು ಕರೆ ನೀಡಿರುವ ಬಂದ್ನಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆಯ ಅಧ್ಯಕ್ಷ ಕೆ.ಆರ್.ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ಕುಮಾರ್ ಶೆಟ್ಟಿ, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವು, ಕನ್ನಡಪರ ಹೋರಾಟಗಾರ ಎಚ್.ವಿ.ಗಿರೀಶ್ಗೌಡ ಮತ್ತಿತರರು ಪಾಲ್ಗೊಂಡಿದ್ದರು.