ನಾನು ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ – ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ತುಮಕೂರು,ಮೇ 28-ನಾನು ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂದು ಹೇಳುವ ಮೂಲಕ ರೈತರ ಸಾಲಮನ್ನಾ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜ್ಯೋತಿಗಣೇಶ್ ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‍ಗಳಲ್ಲಿರುವ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ನಗರದ ಟೌನ್‍ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ಪ್ರಣಾಳಿಕೆಯಲ್ಲಿ ನಾನು ಮುಖ್ಯಮಂತ್ರಿಯಾದರೆ 24 ಗಂಟೆಯೊಳಗೆ ರೈತರ ಸಾಲಮನ್ನಾ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದರು.
ಆದರೆ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ 37 ಸ್ಥಾನಗಳನ್ನು ಗೆದ್ದಿರುವ ಜೆಡಿಎಸ್ ವಾಮಮಾರ್ಗದ ಮೂಲಕ ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹಿಂಬಾಗಿಲಿನಿಂದ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೈತಿಕತೆ ಇದ್ದರೆ ತಾವು ನೀಡಿದ್ದ ಹೇಳಿಕೆಗೆ ಬದ್ಧರಾಗಿ ತಕ್ಷಣ ರೈತರ ಸಾಲ ಮನ್ನಾ ಮಾಡಬೇಕು.ಇಲ್ಲದಿದ್ದರೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ರೈತರು ಹಾಗೂ ರೈತರ ಸಮಸ್ಯೆಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜ್ಯದ ಜನ ಪುರಸ್ಕರಿಸಿ ಮನ್ನಣೆ ನೀಡಿದ್ದರು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಇಂಥವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.
ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಮುಖವಾಡ ಏನೆಂಬುದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದು ಹರಿಹಾಯ್ದರು.
ಪ್ರತಿಭಟನೆಯನ್ನು ಹಿಂಪಡೆಯುವಂತೆ ಸೂಚಿಸಿದ ಪೆÇಲೀಸರ ಮಾತನ್ನು ತಿರಸ್ಕರಿಸಿ ಪ್ರತಿಭಟನೆ ಮುಂದುವರೆಸಿದ್ದರಿಂದ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.
ಡಿವೈಎಸ್ಪಿ ನಾಗರಾಜ್, ಇನ್‍ಸ್ಪೆಕ್ಟರ್‍ಗಳಾದ ಚಂದ್ರಶೇಖರ್, ರಾಧಾಕೃಷ್ಣ ಮತ್ತಿತರರು ಪ್ರತಿಭಟನಾ ಸ್ಥಳದಲ್ಲಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ