ಬೆಂಗಳೂರು, ಮೇ 30- ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ಗೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನಗರದ 63ನೇ ಸೆಷನ್ ನ್ಯಾಯಾಲಯದ ನ್ಯಾಯಾಧೀಶರಾದ ಪರಮೇಶ್ವರ್ ಪ್ರಸನ್ನ ಜಾಮೀನು ನೀಡಲು ನಿರಾಕರಿಸಿದ್ದಾರೆ.
ಆರೋಪಿ ಪ್ರಭಾವಿ ಶಾಸಕರ ಪುತ್ರನಾಗಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ. ಹಲ್ಲೆಗೊಳಗಾಗಿರುವ ವಿದ್ವತ್ ಇನ್ನೂ ಸಂಪೂರ್ಣ ಚೇತರಿಸಿಕೊಂಡಿಲ್ಲ. ಪ್ರಕರಣದಲ್ಲಿ ಇನ್ನೂ ಮೂರ್ನಾಲ್ಕು ಸಾಕ್ಷಿಗಳ ವಿಚಾರಣೆ ನಡೆಸುವ ಅಗತ್ಯವಿದೆ. ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಕಾರ್ಯ ಇನ್ನೂ ಪ್ರಗತಿಯಲ್ಲಿದೆ ಎಂದು ವಿದ್ವತ್ ಪರ ವಕೀಲ ಶ್ಯಾಂ ಸುಂದರ್ ವಾದ ಮಾಡಿದ್ದರು. ಇದನ್ನು ಮಾನ್ಯ ಮಾಡಿದ್ದ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ.
ಕಳೆದ ಮೂರು ತಿಂಗಳ ಹಿಂದೆ ಉದ್ಯಮಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ನನ್ನು ಕಬ್ಬನ್ಪಾರ್ಕ್ ಪೊಲೀಸರು ಬಂಧಿಸಿದ್ದರು. ಫೆ.19ರಿಂದ ನಲಪಾಡ್ಗೆ ಜಾಮೀನು ಸಿಕ್ಕಿಲ್ಲ. ಮೂರು ಬಾರಿ ಜಾಮೀನು ಅರ್ಜಿ ವಜಾಗೊಂಡಿದೆ.