ಕರಾವಳಿ ಭಾಗದಲ್ಲಿ ಭಾರೀ ಮಳೆ: ಸಂತ್ರಸ್ತರ ರಕ್ಷಣೆಗೆ ಧಾವಿಸುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು, ಮೇ 30- ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಂತ್ರಸ್ತರ ರಕ್ಷಣೆಗೆ ಧಾವಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿರುವುದಲ್ಲದೆ, ಸಕಲ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೆರೆ ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಆದೇಶ ನೀಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೀವ್ರ ಮಳೆಯಿಂದ ಜನರ ಪ್ರಾಣ ಹಾನಿ ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಜಿಲ್ಲಾಡಳಿತದೊಂದಿಗೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದರು.
ಮಳೆ ಸಂತ್ರಸ್ತರಿಗೆ ರಕ್ಷಣವೇ ಮೂಲಸೌಕರ್ಯ ಹಾಗೂ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ. ಮಳೆ ಪೀಡಿತ ಜಿಲ್ಲೆಗೆ ರಾಜ್ಯ ಸರ್ಕಾರ ಹೆಚ್ಚುವರಿ ಅತಿವೃಷ್ಟಿ ಅನುದಾನ ನೀಡಲು ಸಿದ್ಧವಿದ್ದು, ಹಾನಿಗೀಡಾದ ರಸ್ತೆ, ವಿದ್ಯುತ್ ಸಂಪರ್ಕಗಳನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು. ಕಡಲ ಕೊರೆತದ ಬಗ್ಗೆ ತೀವ್ರ ನಿಗಾವಹಿಸುವಂತೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.

ಈಗಾಗಲೇ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳವನ್ನು ಕಳುಹಿಸಲಾಗಿದ್ದು, ಸಂಕಷ್ಟದ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೆರವಾಗಲಿದೆ. ಸರ್ಕಾರದೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ