ಬೆಂಗಳೂರು, ಮೇ 31- ರಾಜರಾಜೇಶ್ವರಿನಗರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಗೆಲುವಿಗೆ ಕಾಂಗ್ರೆಸ್ ನಾಯಕರು ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಚುನಾವಣೆಯಲ್ಲಿ ಮುನಿರತ್ನ ಸೋಲುತ್ತಾರೆ ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಅದೆಲ್ಲವನ್ನೂ ತಲೆಕೆಳಗೆ ಮಾಡಿ ಮುನಿರತ್ನ ಗೆದ್ದು ತೋರಿಸಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಇಂದು ಬಲವಾಗಿದೆ ಎಂಬುದು ಸಾಬೀತಾಗಿದೆ ಎಂದರು.
ಜನ ಮುನಿರತ್ನ ಅವರು ಮಾಡಿದ ಒಳ್ಳೆಯ ಕೆಲಸಗಳಿಗೆ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‍ನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸಾರ್ವತ್ರಿಕ ಚುನಾವಣೆಯಲ್ಲೇ ಮುನಿರತ್ನ ಗೆಲ್ಲುತ್ತಿದ್ದರು. ವಿಳಂಬವಾಗಿ ಚುನಾವಣೆ ನಡೆದರೂ ಕಾಂಗ್ರೆಸ್ ಗೆದ್ದಿದೆ. ಮತ ಹಾಕಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.