ಡಿ.ಕೆ.ಶಿವಕುಮಾರ್ ಮೇಲಿನ ಸಿಬಿಐ ದಾಳಿಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

 

ಬೆಂಗಳೂರು, ಮೇ 31- ಡಿ.ಕೆ.ಶಿವಕುಮಾರ್ ಮೇಲಿನ ಸಿಬಿಐ ದಾಳಿಯಿಂದ ಕಾಂಗ್ರೆಸ್ ತಿರುಗಿ ಬಿದ್ದಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೇಂದ್ರ ಸರ್ಕಾರ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್‍ಗೆ ಸರ್ಚ್‍ವಾರೆಂಟ್ ಜಾರಿ ಮಾಡಿದೆ. ಇದು ಖಂಡನೀಯ. ದುರುದ್ದೇಶ ಪೂರಿತ ದಾಳಿ ಎಂದು ವಾಗ್ದಾಳಿ ನಡೆಸಿದರು.

ಇಡೀ ಕಾಂಗ್ರೆಸ್ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಪರವಾಗಿದೆ. ಕಾನೂನು ರೀತಿಯ ಹೋರಾಟ ಸೇರಿದಂತೆ ಎಲ್ಲಾ ರೀತಿಯ ಬೆಂಬಲ ನೀಡಲು ಸಿದ್ದವಿದೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರ ಸಿಬಿಐ ಮೂಲಕ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿದೆ. ಇದು ದುರುದ್ದೇಶ ಪೂರಿತ. ಈ ರೀತಿಯ ಕ್ರಮಗಳಿಗೆ ಕಾನೂನಿನ ಬೆಂಬಲ ಇರುವುದಿಲ್ಲ ಎಂದರು.
ಸಿಬಿಐ ನಡೆಸಿರುವ ದಾಳಿಯಿಂದ ಬಿಜೆಪಿಯವರು ಯಾವುದೇ ರೀತಿಯ ಯಶಸ್ಸು ಸಾಧಿಸುವುದಿಲ್ಲ. ದೇಶಾದ್ಯಂತ ನಡೆದಿರುವ ಲೋಕಸಭೆ ಉಪಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. 2019ರ ಚುನಾವಣೆಯಲ್ಲಿ ಸೋಲಿನ ಮುನ್ಸೂಚನೆ ಸಿಕ್ಕಿರುವುದರಿಂದ ಕೇಂದ್ರ ಸರ್ಕಾರ ಇಂತಹ ಕ್ರಮಗಳನ್ನು ಅನುಸರಿಸಿ ವಿರೋಧ ಪಕ್ಷಗಳನ್ನು ಎದುರಿಸುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ