ಪ್ರಧಾನಿ ನರೇಂದ್ರ ಮೋದಿ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಚಿಂತೆಗೀದಾದ ಬಿಜೆಪಿ

 

ಬೆಂಗಳೂರು, ಜೂ.2- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದು ಬಿಜೆಪಿಯನ್ನು ಚಿಂತೆಗೀಡು ಮಾಡಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಿಷನ್ 20ರ ಗುರಿಯೊಂದಿಗೆ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಿತ್ತು.
ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಕೇವಲ ವಿಧಾನಸೌಧಕ್ಕೆ ಮಾತ್ರ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದ್ದರು. ಇದು ಸಹಜವಾಗಿ ಲೋಕಸಭೆ ಚುನಾವಣೆಯಲ್ಲಿ ನಮಗೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ಇತ್ತು.

ಆದರೆ ನಿನ್ನೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಮುಂದುವರೆಯಲಿದೆ ಎಂದು ಘೋಷಿಸಿದ್ದರು. ಅಲ್ಲದೆ ಕುಮಾರಸ್ವಾಮಿಯನ್ನೇ ಮುಂದಿನ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯನ್ನಾಗಿ ಮುಂದುವರೆಸುವುದಾಗಿ ಪ್ರಕಟಿಸಿದರು.
ಕಾಂಗ್ರೆಸ್-ಜೆಡಿಎಸ್‍ನ ಈ ಒಗ್ಗಟ್ಟು ಬಿಜೆಪಿಯನ್ನು ನಿದ್ದೆಗೆಡುವಂತೆ ಮಾಡಿದೆ. ದೇಶದಲ್ಲಿ ಎಲ್ಲ ಜಾತ್ಯತೀತ ಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪರಸ್ಪರ ಕೈ ಜೋಡಿಸಿರುವುದರಿಂದ ಕಮಲ ಪಡೆಗೆ ಹೊಸ ತಂತ್ರವನ್ನು ರೂಪಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಹೊಸ ಮೈತ್ರಿ:
ಸಾಮಾನ್ಯವಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಿದ್ದವು. 1996ರವರೆಗೂ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಿತ್ತು.
1996ರಲ್ಲಿ ಹೆಚ್.ಡಿ.ದೇವೇಗೌಡರು ಅನಿರೀಕ್ಷಿತವಾಗಿ ಪ್ರಧಾನಿಯಾಗುವ ಸುಯೋಗ ಬಂದಿತ್ತು. ಆ ವೇಳೆ ರಾಜ್ಯದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನತದಳ 16 ಸ್ಥಾನಗಳನ್ನು ಗೆದ್ದಿತ್ತು.

1998, 1999, 2004, 2009 ಹಾಗೂ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪ್ರವರ್ಧಮಾನಕ್ಕೆ ಬಂದಿದೆ. ಕಾಂಗ್ರೆಸ್-ಜೆಡಿಎಸ್ ನಡುವೆ ಜಾತ್ಯತೀತ ಮತಗಳ ವಿಭಜನೆಯೇ ಕಮಲಕ್ಕೆ ವರವಾಗಿ ಪರಿಣಮಿಸಿತ್ತು.
ಪರಿಣಾಮ ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಬಿಜೆಪಿ ಲೋಕಸಭೆಯ 28 ಕ್ಷೇತ್ರಗಳ ಪೈಕಿ 19 ಸ್ಥಾನಗಳನ್ನು ಗೆದ್ದು ರಾರಾಜಿಸಿತ್ತು. ಈಗ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಬಿಜೆಪಿಗೆ ಬಲವಾದ ಪೆಟ್ಟನ್ನು ಕೊಟ್ಟಿದೆ.
ಎರಡು ಸಮಾನ ಪಕ್ಷಗಳು ಒಂದಾಗುತ್ತಿರವುದರಿಂದ ಜಾತ್ಯತೀತ ಮತಗಳು ವಿಭಜನೆಯಾಗುವ ಸಾಧ್ಯತೆಗಳಿಲ್ಲ. ಹಳೆ ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲುವು ಕಷ್ಟಕರವಲ್ಲ.

ಇನ್ನು ಮಧ್ಯಕರ್ನಾಟಕ ಹಾಗೂ ಕರಾವಳಿ ತೀರಾ ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯವಿದ್ದರೆ, ಹೈದರಾಬಾದ್ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಎರಡು ಪಕ್ಷಗಳು ಒಮ್ಮತದ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದರೆ ಬಿಜೆಪಿಯ ನಾಗಾಲೋಟಕ್ಕೆ ಕಡಿವಾಣ ಹಾಕಬಹುದು.
2014ರ ಲೋಕಸಭೆ ಚುನಾವಣೆಯಲ್ಲಿ 17 ಸ್ಥಾನ ಗೆದ್ದಿದ್ದ ಬಿಜೆಪಿಗೆ ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲುವ ಅನಿವಾರ್ಯತೆ ಇದೆ. 2019ರಲ್ಲಿ ಒಂದೊಂದು ಸ್ಥಾನವೂ ಬಿಜೆಪಿಗೆ ಮುಖ್ಯವಾಗುತ್ತದೆ. ಹೀಗಾಗಿ ಗೆಲ್ಲುವ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುವ ಅನಿವಾರ್ಯತೆ ಇದೆ.
ಈಗಾಗಲೇ ಪಕ್ಷವು ಕೂಡ ಗೆಲ್ಲುವ ಕುದುರೆಗಳನ್ನೇ ಕಣಕ್ಕಿಳಿಸಲು ಮುಂದಾಗಿದೆ.ಯಾವ ಯಾವ ಜಿಲ್ಲೆಗಳಲ್ಲಿ ಹಿನ್ನೆಡೆಯಾಗಿದೆಯೋ ಅಂಥ ಕಡೆ ಬೇರು ಮಟ್ಟದಿಂದಲೇ ಪಕ್ಷವನ್ನು ಸಂಘಟಿಸಲು ಕಾರ್ಯತಂತ್ರ ರೂಪಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ