ನೂತನ ಸಚಿವರ ಪ್ರಮಾಣವಚನ ಹಿನ್ನಲೆ: ಜೆಡಿಎಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

 

ಬೆಂಗಳೂರು, ಜೂ.4-ಬುಧವಾರ ನಡೆಯಲಿರುವ ನೂತನ ಸಚಿವರ ಪ್ರಮಾಣವಚನ ಸಮಾರಂಭದ ಹಿನ್ನೆಲೆಯಲ್ಲಿ ಇಂದು ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಶಾಸಕಾಂಗ ಪಕ್ಷದ ಸಭೆಯನ್ನು ಇಂದು ಸಂಜೆ ತಮ್ಮ ನಿವಾಸದಲ್ಲಿ ಕರೆದಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ.

ಜೆಡಿಎಸ್‍ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೂತನ ಸಚಿವರನ್ನು ಸರ್ವಸಮ್ಮತವಾಗಿ ಆಯ್ಕೆ ಮಾಡುವ ಉದ್ದೇಶದಿಂದ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ವಿಧಾನಸಭೆ ಮತ್ತು ವಿಧಾನಪರಿಷತ್‍ನ ಹಲವು ಸದಸ್ಯರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದು, ಇನ್ನು ಸಚಿವ ಸ್ಥಾನ ಯಾರ್ಯಾರಿಗೆ ಎಂಬುದನ್ನು ಅಂತಿಮಗೊಳಿಸಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರ್ಯಾರು ಸಚಿವರಾಗಬೇಕು, ಯಾರಿಗೆ ಯಾವ ಖಾತೆ ನೀಡಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡುವ ಸಾಧ್ಯತೆಗಳಿವೆ.

ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವೆ ಸಚಿವ ಸ್ಥಾನ ಹಾಗೂ ಖಾತೆಗಳ ಹಂಚಿಕೆ ಈಗಾಗಲೇ ಆಗಿದೆ. ಜೆಡಿಎಸ್‍ಗೆ ಲಭ್ಯವಾಗಿರುವ 12 ಸಚಿವ ಸ್ಥಾನಗಳ ಪೈಕಿ ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಇನ್ನು ಉಳಿದಿರುವ 11 ಸಚಿವ ಸ್ಥಾನಗಳಲ್ಲಿ ಬಿಎಸ್‍ಪಿ ಶಾಸಕ ಮಹೇಶ್‍ಗೂ ಒಂದು ಸಚಿವ ಸ್ಥಾನ ನೀಡಬೇಕಿದೆ. ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅವರಿಗೂ ಕೂಡ ಸಚಿವ ಸ್ಥಾನ ಇಲ್ಲವೆ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಗಂಭೀರ ಚರ್ಚೆಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಗುತ್ತದೆ.
ಸಚಿವ ಸ್ಥಾನ ದೊರೆಯದವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಭರವಸೆಯನ್ನು ಸಭೆಯಲ್ಲಿ ವರಿಷ್ಠರು ನೀಡುವ ಸಾಧ್ಯತೆಗಳಿವೆ. ಬುಧವಾರ ನಡೆಯಲಿರುವ ನೂತನ ಸಚಿವರ ಪ್ರಮಾಣವಚನ ಸಮಾರಂಭದಲ್ಲಿ ಜೆಡಿಎಸ್‍ನಿಂದ ಎಷ್ಟು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಮತ್ತು ಯಾರ್ಯಾರಿಗೆ ಯಾವ ಖಾತೆ ಎಂಬುದೂ ಕೂಡ ಸಂಜೆ ನಿರ್ಧಾರವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ