ಮುಂಗಾರು ಮಳೆ ರಾಜ್ಯಾದ್ಯಂತ ಆರಂಭ

ಬೆಂಗಳೂರು, ಜೂ.8-ಮುಂಗಾರು ಮಳೆ ರಾಜ್ಯಾದ್ಯಂತ ಆರಂಭಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯಾ, ಬೆಳ್ತಂಗಡಿ, ಭಂಟ್ವಾಳದಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಉಡುಪಿಯಲ್ಲಿ ರಸ್ತೆ, ಹೊಲ, ಗದ್ದೆಗಳೆಲ್ಲ ಜಲಾವೃತಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರು ಇಂದು ಮತ್ತು ನಾಳೆ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ನದಿಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸಮುದ್ರ ಮಟ್ಟದಲ್ಲಿ ಏರಿಕೆಯಾಗುವ ಆತಂಕವಿರುವ ಹಿನ್ನೆಲೆಯಲ್ಲಿ ಕರಾವಳಿ ತೀರದಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉಡುಪಿಯಲ್ಲಿ ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ಕೂಡ ವರ್ಷಧಾರೆ ಮುಂದುವರೆದ ಪರಿಣಾಮ ಜನ ಮನೆಯಿಂದ ಹೊರಬಾರದಂತಹ ಸ್ಥಿತಿ ನಿರ್ಮಾಣವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ, ಶೃಂಗೇರಿ, ಮೂಡಿಗೆರೆಯಲ್ಲಿ ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಮಲೆನಾಡಿನಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ಈ ಭಾಗದ ನದಿಗಳು ತುಂಬಿ ಹರಿಯುತ್ತಿವೆ.
ಇತ್ತ ಬಿಸಿಲ ನಾಡು ವಿಜಯಪುರದಲ್ಲೂ ಕೂಡ ಮಳೆ ಆರಂಭವಾಗಿದೆ. ನಿನ್ನೆ ರಾತ್ರಿಯಿಂದ ವಿಜಯಪುರ ಜಿಲ್ಲೆಯಾದ್ಯಂತ ಮುಂಗಾರು ಮಳೆ ಅಬ್ಬರಿಸಿದ್ದು, ಇಂದು ಬೆಳಗ್ಗೆ ಕೂಡ ಮಳೆ ಮುಂದುವರೆದಿದ್ದು, ರೈತರ ಮೊಗದಲ್ಲಿ ಹರ್ಷ ಮೂಡಿದೆ.
ಹಲವೆಡೆ ಮುಂಗಾರು ಚುರುಕುಗೊಂಡಿದ್ದು, ನಿನ್ನೆ ಮತ್ತು ಇಂದು ಎಡಬಿಡದೆ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.
ಮೂರು ದಿನ ಭಾರೀ ಮಳೆ ಮುನ್ಸೂಚನೆ- ಕಟ್ಟೆಚ್ಚರ: ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆ ಹಾಗೂ ಮೇಲ್ಮೈ ಸುಳಿಗಾಳಿಯಿಂದಾಗಿ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದರಿಂದ ರಾಜ್ಯ ಹಲವೆಡೆ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ.
ನಿನ್ನೆಯಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುಮಾರು 300 ಮಿಲಿಮೀಟರ್‍ನಷ್ಟು ಅಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸರಾಸರಿ 150 ಮಿಲಿ ಮೀಟರ್‍ನಷ್ಟು ಹೆಚ್ಚಿನ ಮಳೆಯಾಗಿದೆ. ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲೂ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಇನ್ನು ಮೂರು ದಿನಗಳ ಕಾಲ ರಾಜ್ಯದೆಲ್ಲೆಡೆ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ.
ನಾಳೆಯೊಳಗಾಗಿ ನೈರುತ್ಯ ಮುಂಗಾರು ಇಡೀ ರಾಜ್ಯ ವ್ಯಾಪಿಸುವ ಮುನ್ಸೂಚನೆಗಳಿವೆ ಎಂದು ಅವರು ಹೇಳಿದರು.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತಂಪಾದ ಮೇಲ್ಮೈ ಗಾಳಿ ಬೀಸುತ್ತಿದೆ. ಆಗಾಗ್ಗೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಒಟ್ಟಾರೆ ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ