ನೂತನ ಸಚಿವರಿಗೆ ಖಾತೆ ಹಂಚಿಕೆ: ಇಂದು ಅಂತಿಮ ತೀರ್ಮಾನ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

 

ಬೆಂಗಳೂರು, ಜೂ.8- ಸಮ್ಮಿಶ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಇಂದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಜೆ.ಪಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್‍ನ ಹೊಸ ಸಚಿವರಿಗೆ ಖಾತೆ ಹಂಚುವ ಪ್ರಕ್ರಿಯೆ ಇಂದು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ತೊಂದರೆ ಇಲ್ಲ. ಸಚಿವ ಸ್ಥಾನ ಸಿಗದ ಶಾಸಕರಲ್ಲಿ ಉಂಟಾಗಿರುವ ಅಸಮಾಧಾನವನ್ನು ಸರಿಪಡಿಸಲಾಗುವುದು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಆಡಳಿತ ಮುನ್ನಡೆಸಲಾಗುವುದು ಎಂದು ತಿಳಿಸಿದರು.

ಸಚಿವ ಸ್ಥಾನ ಸಿಗದೆ ಜೆಡಿಎಸ್ ಮತ್ತು ಕಾಂಗ್ರೆಸ್‍ನಲ್ಲಿ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಲಾಗುವುದು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಹಂಚಿಕೆ ಮಾಡುವಾಗ ಅಸಮಾಧಾನ ಉಂಟಾಗುವುದು ಸಹಜ. ಒಂದೆರಡು ದಿನ ಸಣ್ಣಪುಟ್ಟ ಸಮಸ್ಯೆಗಳು ಇರುತ್ತವೆ. ಎಲ್ಲವನ್ನು ಸರಿಪಡಿಸುವ ವಿಶ್ವಾಸವನ್ನು ಸಿಎಂ ವ್ಯಕ್ತಪಡಿಸಿದರು.

ಜೆಡಿಎಸ್‍ನಲ್ಲಿ ಮಾಜಿ ಸಚಿವ ಎಚ್.ವಿಶ್ವನಾಥ್, ಶಾಸಕ ಕೆ.ಗೋಪಾಲಯ್ಯ ಸೇರಿದಂತೆ ಯಾರೂ ಅಸಮಾಧಾನಗೊಂಡಿಲ್ಲ. ವಿಶ್ವನಾಥ್ ಅವರು ತಮ್ಮೊಂದಿಗೆ ಇಂದು ಉಪಹಾರ ಸೇವಿಸಿದ್ದಾರೆ. ಕಾಂಗ್ರೆಸ್‍ನಲ್ಲಿ ಸ್ವಲ್ಪ ಮಟ್ಟದ ಅಸಮಾಧಾನಗಳಿರಬಹುದು. ಆದರೆ, ನಮ್ಮ ಪಕ್ಷದಲ್ಲಿ ಕಾಂಗ್ರೆಸ್‍ನಂಥ ಅಸಮಾಧಾನಗಳು ಕಂಡು ಬಂದಿಲ್ಲ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ